ಮೈಸೂರು: ಮೈಸೂರು ಜಿಲ್ಲೆಯಲ್ಲಿ ಇಂದು 6 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಡಿಎಚ್ ಒ ಕುಮಾರಸ್ವಾಮಿ, ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಆರು ಮಂದಿ ರೋಗಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲದಿದ್ದರೂ ಕೋವಿಡ್ ಟೆಸ್ಟ್ ಮಾಡಿದಾಗ ಸೋಂಕು ಪತ್ತೆಯಾಗಿದೆ. 5 ಮಂದಿ 60 ವರ್ಷ ಮೇಲ್ಪಟ್ಟವರಾಗಿದ್ದು, 48 ವರ್ಷದ ಓರ್ವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಸೋಂಕು ಪತ್ತೆಯಾದ ಎಲ್ಲಾ ಆರು ಮಂದಿಗೂ ತುರ್ತು ನಿಗಾ ಘಟಕದಲ್ಲಿರಿಸಿ ಅಗತ್ಯ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಆರೋಗ್ಯ ಇಲಾಖೆ ಸೂಚನೆಯಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 1700ಕ್ಕೂ ಹೆಚ್ಚು ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಿಂದ ಕೇರಳ ರಾಜ್ಯಗಳಿಗೆ ತೆರಳುವವರ ಮೇಲೆ ನಿಗವಹಿಸಲು ಆಶಾ ಕಾರ್ಯಕರ್ತರಿಗೆ ತಿಳಿಸಲಾಗಿದೆ. ಆಶಾ ಕಾರ್ಯಕರ್ತೆಯರ ಮೂಲಕ ಕೋವಿಡ್ ಅರಿವು ಮೂಡಿಸಲು ಜಿಲ್ಲಾಡಳಿತ ಸನ್ನದ್ದವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಹೇಳಿದರು.