Tuesday, June 16, 2026
Google search engine

Homeರಾಜ್ಯಸುದ್ದಿಜಾಲಮೈಸೂರು ಪಬ್ ದುರಂತ: ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು, ಅಕ್ರಮ ಪಬ್‌ಗಳ ವಿರುದ್ಧ ಕಠಿಣ ಕ್ರಮ...

ಮೈಸೂರು ಪಬ್ ದುರಂತ: ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು, ಅಕ್ರಮ ಪಬ್‌ಗಳ ವಿರುದ್ಧ ಕಠಿಣ ಕ್ರಮ – ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರದ ದಟ್ಟಗಳ್ಳಿ ಸಮೀಪದ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆ, ಅಬಕಾರಿ ಡಿಸಿ ನಾಗರಾಜಪ್ಪ ಅವರನ್ನು ಅಮಾನತುಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಬ್ ಮಾಲೀಕರ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪ್ರಾಥಮಿಕ ಮಾಹಿತಿ ಪ್ರಕಾರ ಸಂಬಂಧಿತ ಪಬ್ ಯಾವುದೇ ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿತ್ತು. ಇದೇ ರೀತಿ ಮೈಸೂರಿನ ಹಲವು ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳು ಅಗತ್ಯ ಪರವಾನಗಿ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಮಾಹಿತಿ ಲಭ್ಯವಾಗಿದ್ದು, ಅವುಗಳ ವಿರುದ್ಧ ವ್ಯಾಪಕ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

“ಲೈಸೆನ್ಸ್ ಇಲ್ಲದೆ ಬಾರ್‌ಗಳು ಕಾರ್ಯನಿರ್ವಹಿಸುತ್ತಿದ್ದರೂ ಅಬಕಾರಿ ಇಲಾಖೆ ಸಮರ್ಪಕ ನಿಗಾ ವಹಿಸಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ. ಆದ್ದರಿಂದ ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು ಮಾಡುತ್ತಿದ್ದೇನೆ” ಎಂದು ಸಚಿವರು ಹೇಳಿದರು.

ನಗರದ ಎಲ್ಲಾ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಅನುಷ್ಠಾನ ಕುರಿತು ಪರಿಶೀಲನೆ ನಡೆಸುವಂತೆ ಅಗ್ನಿಶಾಮಕ ಇಲಾಖೆ, ಅಬಕಾರಿ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗ್ನಿಶಾಮಕ ಇಲಾಖೆಯ ಅನುಮೋದನೆ ಮತ್ತು ಸುರಕ್ಷತಾ ಪ್ರಮಾಣಪತ್ರಗಳಿಲ್ಲದೆ ಯಾವುದೇ ಸಂಸ್ಥೆ ಕಾರ್ಯನಿರ್ವಹಿಸಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಮದ್ಯ ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ಪರವಾನಗಿ ಇಲ್ಲದ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳು ಕಾನೂನುಬಾಹಿರವಾಗಿದ್ದು, ಇಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ದುರಂತ ಸಂಭವಿಸಿದ ನಂತರ ಕ್ರಮ ಕೈಗೊಳ್ಳುವ ಬದಲು, ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ವಿಷಯ ತರಲಾಗುವುದು ಎಂದರು. ಇದೇ ವೇಳೆ ಎಂಎಲ್‌ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆಗೆ ಹೆಚ್ಚಿನ ರೈತರು ಬೆಂಬಲ ಸೂಚಿಸಿದ್ದು, ಇದರ ವಿರುದ್ಧ ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

RELATED ARTICLES
- Advertisment -
Google search engine

Most Popular