Saturday, April 19, 2025
Google search engine

Homeರಾಜ್ಯಸುದ್ದಿಜಾಲಭತ್ತ ಖರೀದಿ ಕೇಂದ್ರ ನಿರ್ವಹಣೆಗೆ ಅಗತ್ಯ ಸಿದ್ದತೆ: ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಭತ್ತ ಖರೀದಿ ಕೇಂದ್ರ ನಿರ್ವಹಣೆಗೆ ಅಗತ್ಯ ಸಿದ್ದತೆ: ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಸರ್ಕಾರವು ಅನುಮತಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳ ನಿರ್ವಹಣೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕನಿಷ್ಠ ಬೆಂಬಲ ಬೆಲೆ ಯೋಜನೆ ಸಂಬಂಧ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ೨೦೨೩-೨೪ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗಾಗಿ ಸರ್ಕಾರ ಅನುಮತಿ ನೀಡಿದೆ. ನವೆಂಬರ್ ೧೫ರಿಂದ ರೈತರ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು. ಡಿಸೆಂಬರ್ ೧ ರಿಂದ ನೋಂದಾಯಿತ ರೈತರಿಂದ ಭತ್ತ ಖರೀದಿಸಬೇಕು. ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾ ಮಂಡಳಿಯನ್ನು ಖರೀದಿಗೆ ಸಂಗ್ರಹಣಾ ಸಂಸ್ಥೆಯನ್ನಾಗಿ ನಿಯೋಜಿಸಲಾಗಿದೆ ಎಂದರು.

ಪ್ರತಿ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆ ವತಿಯಿಂದ ಗ್ರೇಡರ್‍ಗಳನ್ನು ನೇಮಿಸಬೇಕು. ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ಖರೀದಿ ಕೇಂದ್ರದ ಕಾರ್ಯ ಪ್ರಗತಿ ಬಗ್ಗೆ ಮೇಲುಸ್ತುವಾರಿ ಮಾಡಿ ತಪಾಸಣೆ ಮಾಡಬೇಕು. ಭತ್ತವನ್ನು ಸರಬರಾಜು ಮಾಡಿದ ರೈತರಿಗೆ ೧೫ ದಿನಗಳೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಹಣ ಜಮೆ ಮಾಡಬೇಕು. ಮಧ್ಯವರ್ತಿಗಳಿಗೆ ಅವಕಾಶ ಕೊಡಬಾರದು. ಪಾರದರ್ಶಕವಾಗಿ ರೈತರ ನೋಂದಣಿ ಹಾಗೂ ಭತ್ತ ಖರೀದಿ ಪ್ರಕ್ರಿಯೆ ನಡೆಸಬೇಕು ಎಂದು ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನೋಂದಣಿ ಕೇಂದ್ರ ತೆರೆಯಲು ಅಗತ್ಯವಿರುವ ಕಂಪ್ಯೂಟರ್, ವಿದ್ಯುತ್, ಗೋದಾಮು ವ್ಯವಸ್ಥೆ, ಸಿಬ್ಬಂದಿ ನೇಮಕ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ರೈತರಿಂದ ಭತ್ತವನ್ನು ಖರೀದಿಸಿ ಗೋದಾಮುಗಳಲ್ಲಿ ಸಂಗ್ರಹಿಸಿ ಭತ್ತವನ್ನು ಹಲ್ಲಿಂಗ್‌ಗಾಗಿ ಹತ್ತಿರವಿರುವ ನೋಂದಾಯಿತ ಅಕ್ಕಿ ಗಿರಣಿಗಳಿಗೆ ಸಾಗಾಣಿಕೆ ಮಾಡಬೇಕು ಎಂದರು.

ಎಲ್ಲ ರೈತ ಸಂಪರ್ಕ ಕೇಂದ್ರ, ತಾಲೂಕು ಕೇಂದ್ರ, ಗ್ರಾಮ ಪಂಚಾಯಿತಿಗಳಲ್ಲಿ ಖರೀದಿ ಕೇಂದ್ರಗಳ ವಿವರ, ನೋಂದಣಿ, ಭತ್ತಕ್ಕೆ ಸರ್ಕಾರ ನಿಗದಿಪಡಿಸಿರುವ ದರ ಸೇರಿದಂತೆ ಮಾಹಿತಿ ನೀಡಬೇಕು. ಕಚೇರಿ, ಗೋದಾಮುಗಳ ಮುಂದೆಯೂ ಖರೀದಿ ಕೇಂದ್ರ ನೋಂದಣಿ ಕುರಿತ ಮಾಹಿತಿಯ ಬ್ಯಾನರ್‍ಗಳನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ಉಪವಿಭಾಗಾಧಿಕಾರಿ ಮಹೇಶ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಯೋಗಾನಂದ, ಜಂಟಿ ಕೃಷಿ ನಿರ್ದೇಶಕರಾದ ಎಸ್.ಎಸ್. ಆಬೀದ್, ಕರ್ನಾಟಕ ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಾಲಕೃಷ್ಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಜಿಲ್ಲಾ ಶಾಖಾ ವ್ಯವಸ್ಥಾಪಕರಾದ ರವೀಂದ್ರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಪ್ರಕಾಶ್, ಇತರೆ ಅದಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular