ಮೈಸೂರು : ದೇಶದ ಯುವಜನತೆಗೆ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆರಂಭಿಸಿರುವ ‘ಮೈ ಭಾರತ್’ (MY Bharat) ಪೋರ್ಟಲ್ಗೆ ನೋಂದಣಿ ಅಭಿಯಾನ ಆರಂಭವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ‘ಮೈ ಭಾರತ್’ ತುರ್ತು ನೋಂದಣಿ ಅಭಿಯಾನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15 ರಿಂದ 29 ವರ್ಷದೊಳಗಿನ ಯುವಕರು ಈ ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿಕೊಂಡು ಉದ್ಯೋಗಾವಕಾಶಗಳು, ಕೌಶಲ್ಯ ತರಬೇತಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಇಂಟರ್ನ್ಶಿಪ್ ಪಡೆಯಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿಯೇ ಸರ್ಕಾರಿ ಹಾಗೂ ಕೈಗಾರಿಕಾ ಕ್ಷೇತ್ರದ ಅನುಭವ ಪಡೆಯಲು ಈ ಯೋಜನೆ ಸಹಕಾರಿಯಾಗಲಿದೆ. ಅಲ್ಲದೆ, ವೃತ್ತಿಪರ ಕೌಶಲ್ಯಗಳನ್ನು ಬೆಳೆಸಲು ವಿಶೇಷ ತರಬೇತಿ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುವುದು ಎಂದು ತಿಳಿಸಿದರು.
ದೇಶಾದ್ಯಂತ 5 ಕೋಟಿ ಯುವಕರನ್ನು ‘ಮೈ ಭಾರತ್’ ಪೋರ್ಟಲ್ನಲ್ಲಿ ನೋಂದಾಯಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಪ್ರತಿ ಜಿಲ್ಲೆಗೆ 1 ಲಕ್ಷ ಯುವಕರ ನೋಂದಣಿಯ ಗುರಿ ನಿಗದಿಪಡಿಸಲಾಗಿದೆ. ಶಿಕ್ಷಣ ಇಲಾಖೆ, ಎನ್ಎಸ್ಎಸ್ ಹಾಗೂ ವಿವಿಧ ಕಾಲೇಜುಗಳು ವಿದ್ಯಾರ್ಥಿಗಳನ್ನು ನೋಂದಣಿಗೆ ಉತ್ತೇಜಿಸುವಂತೆ ಸೂಚಿಸಲಾಗಿದೆ.
ಜೊತೆಗೆ, ಪ್ರತಿ ಇಲಾಖೆಯಲ್ಲಿ ನೋಡಲ್ ಅಧಿಕಾರಿ ಹಾಗೂ ವಿದ್ಯಾರ್ಥಿ ಪ್ರತಿನಿಧಿಯನ್ನು ‘ನೋಡಲ್ ಅಂಬಾಸಿಡರ್’ ಆಗಿ ನೇಮಿಸಲು ಸೂಚಿಸಲಾಗಿದ್ದು, ವಿಕಸಿತ್ ಭಾರತ್ ಪಾದಯಾತ್ರೆ’ ಮೂಲಕ ಯುವಕರಲ್ಲಿ ರಾಷ್ಟ್ರೀಯ ಜಾಗೃತಿ ಮೂಡಿಸಲಾಗುವುದು. ಸ್ವಾತಂತ್ರ್ಯ ಹೋರಾಟಗಾರರ ಜೀವನ, ರಾಷ್ಟ್ರೀಯ ಮಹತ್ವದ ದಿನಗಳು ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಸಂಘಟನೆಗಳ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗುವ 250 ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಶಿಬಿರ ಆಯೋಜಿಸಲಾಗುತ್ತಿದ್ದು, ಸಾಂಸ್ಕೃತಿಕ ವಿನಿಮಯ ಮತ್ತು ರಾಷ್ಟ್ರೀಯ ಏಕೀಕರಣಕ್ಕೆ ಉತ್ತೇಜನ ನೀಡಲಾಗುತ್ತದೆ. ಈ ಬಾರಿ ಮೈಸೂರಿನಲ್ಲಿಯೂ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಯುವಕರಿಗೆ ಅರಿವು ಮೂಡಿಸುವ ಜೊತೆಗೆ, ಸ್ಥಳೀಯ ಯುವಜನ ಕ್ಲಬ್ಗಳ ಪ್ರತಿಭಾವಂತ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಅಧಿಕಾರಿ ಅಖಿಲ್.ಪಿ., ಇನ್ಕಮ್ ಅಂಡ್ ಕಾಮರ್ಸ್ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಸೈಹಾದ್ ನಜೀರ್ ಅಹ್ಮದ್, ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಕೃಷ್ಣಮೂರ್ತಿ, ಡಿಪಿಇಒ ಹಾಗೂ ಡಿಡಿಪಿಇ ಅಧಿಕಾರಿ ಎಂ.ಎಸ್.ವಿಜಯಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



