ಬೆಂಗಳೂರು :  ನಟ ದರ್ಶನ್  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧೀಸಿದಂತೆ ಜೈಲಿನಲ್ಲಿದ್ದು, ಇದೀಗ‌ ವಿಶೇಷ ಸೌಲಭ್ಯವಿರುವ   ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ಅವರು, ಜೈಲಿನ ಆಸ್ಪತ್ರೆಯನ್ನು ಹೊರತುಪಡಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ (Darshan) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ಎಸ್‌ ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಯಲಿದೆ. ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಇದರಿಂದ ತಮ್ಮ ನೋವು ಕಡಿಮೆಯಾಗಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹೊರಗಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.ವಿಶೇಷ ಸೌಲಭ್ಯಗಳಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅರ್ಜಿ ಸಲ್ಲಿಸಿದ್ದಾರೆ. ಆರೋಗ್ಯದ ವಿಚಾರವಾಗಿರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನಕುಮಾರ್  ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಬುಧವಾರ ಆಕ್ಷೇಪಣೆ ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.