ಬೆಂಗಳೂರು  :  2023ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಬಿಡುಗಡೆ ಮಾಡಿದ್ದ 'ಕಮಿಷನ್ ರೇಟ್ ಕಾರ್ಡ್'  ಜಾಹೀರಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ   ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್‌   ಬುಧವಾರ ವಜಾಗೊಳಿಸಿ ಆದೇಶಿಸಿದೆ. ಹೈಕೋರ್ಟ್‌ನ ಈ ಮಹತ್ವದ ತೀರ್ಪಿನಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಜಯ ಸಿಕ್ಕಂತಾಗಿದೆ.ಕಳೆದ ವರ್ಷವಷ್ಟೇ ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್‌, ಇದೀಗ ಪ್ರಮುಖ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ  ಅವರಿದ್ದ ಏಕಸದಸ್ಯ ಪೀಠವು ಸಿದ್ಧರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿ, "ಅರ್ಜಿಯನ್ನು ಅನುಮತಿಸಲಾಗಿದೆ, ಪ್ರಕರಣವನ್ನು ರದ್ದುಗೊಳಿಸಲಾಗಿದೆ" ಎಂದು ತೀರ್ಪು ಪ್ರಕಟಿಸಿತುಇದೇ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜುಲೈ 4 ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಅಷ್ಟೇ ಅಲ್ಲದೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಲ್ಲಿಕೆಯಾಗಿದ್ದ ಕ್ರಿಮಿನಲ್ ವಿಚಾರಣೆಗೂ ಹೈಕೋರ್ಟ್ ಇದೇ ವರ್ಷದ ಜನವರಿಯಲ್ಲಿ ತಡೆಯಾಜ್ಞೆ ನೀಡಿತ್ತು. ಇದೀಗ ಸಿದ್ಧರಾಮಯ್ಯ ವಿರುದ್ಧದ ಅರ್ಜಿಯನ್ನೇ ಹೈಕೋರ್ಟ್ ಸಂಪೂರ್ಣವಾಗಿ ವಜಾಗೊಳಿಸಿದೆ.