ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಸರಣಿ ಸಾವುಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿನ 50ಕ್ಕೂ ಹೆಚ್ಚು ಕಾಡಾನೆಗಳ ಹಿಂಡನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಓಡಿಸಲು ಜಿಲ್ಲಾಡಳಿತ ಮತ್ತು ಅರಣ್ಯ ಅಧಿಕಾರಿಗಳು ಸಿದ್ಧತೆ ನಡೆಸುತ್ತಿರುವುದಕ್ಕೆ ಕಾಫಿನಾಡಿನ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಬೇಲೂರು ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಾಸನ ಜಿಲ್ಲಾಧಿಕಾರಿಗಳ ವಿರುದ್ಧ ಮೂಡಿಗೆರೆ ತಾಲೂಕಿನ ಸಾರ್ವಜನಿಕರು ಕಿಡಿಕಾರಿದ್ದಾರೆ.  ಸದ್ಯ 50ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೇಲೂರು ಮತ್ತು ಮೂಡಿಗೆರೆ ತಾಲೂಕಿನ ಗಡಿಭಾಗದಲ್ಲಿ ಬೀಡುಬಿಟ್ಟಿವೆ. ಹಾಸನ ಜಿಲ್ಲಾಡಳಿತವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಈ ಆನೆಗಳನ್ನು ಸುಮಾರು 100 ಕಿ.ಮೀ. ದೂರದಲ್ಲಿರುವ ಭದ್ರಾ ಅಭಯಾರಣ್ಯಕ್ಕೆ ಓಡಿಸಲು ಮುಂದಾಗಿದೆ  ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.ಪ್ರಸ್ತುತ ಮಲೆನಾಡಿನಲ್ಲಿ ಅಡಿಕೆ ಮತ್ತು ಕಾಫಿ ಕೊಯ್ಲಿನ ಸಮಯವಾಗಿದ್ದು, ತೋಟಗಳಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಕಾಡಾನೆಗಳ ಹಿಂಡನ್ನು ಈ ಭಾಗದ ಮೂಲಕ ಓಡಿಸಲು ಮುಂದಾದರೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಯಾರು ಹೊಣೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಆನೆಗಳನ್ನು ಓಡಿಸುವ ಅವೈಜ್ಞಾನಿಕ ಕ್ರಮವನ್ನು ತಕ್ಷಣ ಕೈಬಿಡಬೇಕು. ಬದಲಾಗಿ, ಆನೆಗಳನ್ನು ಸೆರೆಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವ ವೈಜ್ಞಾನಿಕ ಮಾರ್ಗವನ್ನು ಸರ್ಕಾರ ಅನುಸರಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಆನೆಗಳನ್ನು ಓಡಿಸುವ ಕ್ರಮಕ್ಕೆ ಮುಂದಾದರೆ ಊಹೆಗೂ ನಿಲುಕದ ರೀತಿಯಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮೂಡಿಗೆರೆ ತಾಲೂಕಿನ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.