ಜನರು ಕಚೇರಿಗೆ ಅಲೆಯುವುದನ್ನು ತಪ್ಪಿಸಿ ಆಡಳಿತ ವ್ಯವಸ್ಥೆಯನ್ನೇ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ಪ್ರಜಾಸೇವೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಚಾಲನೆ

ತುಮಕೂರು : ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೆ ಅಲೆಯುವ ಪರಿಸ್ಥಿತಿ ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವೆ’ ಅಭಿಯಾನಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಪ್ರಜಾಸೇವೆ ಅಭಿಯಾನವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮವಾಗಿದ್ದು, ರಾಜ್ಯಾದ್ಯಂತ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಹಲವು ಬಾರಿ ಅಲೆದಾಡಬೇಕಾದ ಪರಿಸ್ಥಿತಿಯಿದೆ. ಸಣ್ಣ ಕೆಲಸವೂ ಆಗದಿದ್ದಾಗ ಜನರು ನಿರಾಸೆಗೊಳ್ಳುತ್ತಾರೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸರ್ಕಾರವೇ ಜನರ ಬಳಿಗೆ ಹೋಗಬೇಕೆಂಬ ಆಶಯದಿಂದ ಪ್ರಜಾಸೇವೆ ಅಭಿಯಾನವನ್ನು ರೂಪಿಸಲಾಗಿದೆ. ಅಭಿಯಾನದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಅವುಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಸಾಧ್ಯವಾದಷ್ಟು ಅರ್ಜಿಗಳನ್ನು ಅಂದೇ ಸಂಜೆ ವೇಳೆಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಿದ್ದಾರೆ. ಬಾಕಿ ಉಳಿದಿರುವ ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದರು.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ತಮ್ಮ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ತಮ್ಮ ಜಿಲ್ಲೆಗಳಲ್ಲಿ ಪ್ರಜಾಸೇವೆ ಅಭಿಯಾನ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಸಾವಿರಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು, ಗುಬ್ಬಿ ಮತ್ತು ಕುಣಿಗಲ್ನಲ್ಲಿ ಕಾರ್ಯಕ್ರಮಗಳು ನಡೆದಿದ್ದು, ಇದೀಗ ಕೊರಟಗೆರೆಯಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಈ ಅಭಿಯಾನ ನಡೆಯುತ್ತಿದೆ. ಜನರು ಸಲ್ಲಿಸುವ ಅರ್ಜಿಗಳ ಪೈಕಿ ಕನಿಷ್ಠ ಶೇ.50ರಷ್ಟು ಸಮಸ್ಯೆಗಳಿಗಾದರೂ ಪರಿಹಾರ ಕಲ್ಪಿಸಲು ಸಾಧ್ಯವಾದರೆ ಅದು ನಮಗೆ ಸಮಾಧಾನ ತರುವ ಸಂಗತಿಯಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಈ ಕಾರ್ಯಕ್ರಮದ ನಿಜವಾದ ಉದ್ದೇಶ. ಚುನಾವಣೆಗೆ ಮುನ್ನ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದೆವು. ಆಗ ವಿರೋಧ ಪಕ್ಷದವರು ಗೇಲಿ ಮಾಡಿದ್ದರು. ಜನರಿಂದ ಮತ ಪಡೆದು ಯೋಜನೆಗಳನ್ನು ಜಾರಿಗೊಳಿಸುವುದಿಲ್ಲ ಎಂದು ಟೀಕಿಸಿದ್ದರು. ಆದರೆ ಎಲ್ಲ ಟೀಕೆಗಳ ನಡುವೆಯೂ ನಾವು ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ರಾಜ್ಯಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವನ್ನು ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿಯೂ ವ್ಯವಸ್ಥೆ ಮಾಡಲಾಗಿದೆ. ವಿವಿಧ ಕಾರ್ಯಕ್ರಮಗಳ ಮೂಲಕ ಜನರಿಗೆ ಯೋಜನೆಗಳ ಪ್ರಯೋಜನ ತಲುಪಿಸಲಾಗುತ್ತಿದೆ. ಸರ್ಕಾರವು ಪ್ರತಿವರ್ಷ ಸುಮಾರು ₹50 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಿದೆ. ಈವರೆಗೆ ಒಟ್ಟು ₹1.62 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.ವಿಶ್ವಗುರು ಬಸವಣ್ಣನವರು ‘ನುಡಿದಂತೆ ನಡೆ’ ಎಂದು ಹೇಳಿದ್ದಾರೆ. ಅವರ ತತ್ವದಂತೆ ಚುನಾವಣೆಗೆ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸುವ ಕೆಲಸ ಮಾಡಲಾಗಿದೆ. ರಾಜ್ಯವನ್ನು ಹಸಿವು ಮುಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಸಾಧನೆ ಮಾಡಿದ್ದೇವೆ. ಸಾಮಾನ್ಯ ಜನರಿಗೆ ಆಹಾರ ಒದಗಿಸುವ ಈ ಕಾರ್ಯಕ್ರಮಕ್ಕೆ ವಿಶ್ವಸಂಸ್ಥೆಯ ಮಟ್ಟದಲ್ಲಿಯೂ ಪ್ರಶಂಸೆ ವ್ಯಕ್ತವಾಗಿದೆ. ವಿದೇಶಗಳಲ್ಲಿಯೂ ಅನ್ನಭಾಗ್ಯ ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ.ಶಕ್ತಿ ಯೋಜನೆಯನ್ನು ಗ್ಯಾರಂಟಿ ಯೋಜನೆಗಳಲ್ಲಿ ಸೇರಿಸುವ ನಿರ್ಧಾರವನ್ನು ರಾತ್ರಿ ಎರಡು ಗಂಟೆಯ ವೇಳೆಗೆ ಕೈಗೊಳ್ಳಲಾಗಿತ್ತು. ಈ ಯೋಜನೆ ಯಶಸ್ವಿಯಾಗುವುದಿಲ್ಲ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿದ್ದವು. ಆದರೆ ಮಹಿಳೆಯರಿಗೆ ಈ ಯೋಜನೆಯಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಶ್ರೀಮತಿ ಸೋನಿಯಾ ಗಾಂಧಿ ಅವರು ತಿಳಿಸಿದ್ದರು. ಅದರಂತೆ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಕೇವಲ ಕಾಂಗ್ರೆಸ್ ಪಕ್ಷದ ಮಹಿಳೆಯರಿಗೆ ನೀಡಿಲ್ಲ. ಜಾತಿ, ಧರ್ಮ ಹಾಗೂ ಪಕ್ಷಭೇದವಿಲ್ಲದೆ ಅರ್ಹರಾದ ಎಲ್ಲರಿಗೂ ಯೋಜನೆಗಳ ಪ್ರಯೋಜನ ಒದಗಿಸಲಾಗಿದೆ ಎಂದರು.ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ನೀಡಲಾಗುತ್ತಿದೆ. ಮಹಿಳೆಯರಲ್ಲಿ ಆತ್ಮಸ್ಥೈರ್ಯ ಬೆಳೆಸುವುದು ಹಾಗೂ ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಉದ್ದೇಶವಾಗಿದೆ. ಈ ಯೋಜನೆಯಿಂದ ಅನೇಕ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಬಡತನ ಕಡಿಮೆಯಾಗಲು ನೆರವಾಗಿದೆ. ಗೃಹಲಕ್ಷ್ಮೀ ಹಣವನ್ನು ಬಳಸಿಕೊಂಡು ಮಹಿಳೆಯೊಬ್ಬರು ತಮ್ಮ ಮಗಳಿಗೆ ಕಂಪ್ಯೂಟರ್ ಖರೀದಿಸಿರುವ ಉದಾಹರಣೆಯಿದೆ. ಹಿರಿಯ ನಾಗರಿಕರು ತಮ್ಮ ಆರೋಗ್ಯದ ಖರ್ಚುಗಳಿಗೆ ಈ ಹಣವನ್ನು ಬಳಸಿಕೊಳ್ಳುತ್ತಿದ್ದಾರೆ. ಹೀಗೆ ಗ್ಯಾರಂಟಿ ಯೋಜನೆಗಳು ಜನರ ದೈನಂದಿನ ಬದುಕಿನಲ್ಲಿ ಬದಲಾವಣೆ ತರುತ್ತಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಿದ್ದಾರೆ ಎಂದರು. ಕಂದಾಯ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಬಡವರ ಬದುಕಿಗೆ ಯಾವ ರೀತಿಯಲ್ಲಿ ನೆರವಾಗಬಹುದು ಎಂಬುದರ ಕುರಿತು ಯೋಚಿಸಿದೆ. ರಾಜ್ಯದ ಅನೇಕ ಗ್ರಾಮಗಳಲ್ಲಿ ಇಂದಿಗೂ ಬಡ ಕುಟುಂಬಗಳು ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಅವರಿಗೆ ಶಾಶ್ವತ ಸೂರು ಇಲ್ಲದಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿವೇಶನರಹಿತ ಬಡ ಕುಟುಂಬಗಳಿಗೆ 15 ಲಕ್ಷ ನಿವೇಶನಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ 20×30 ಅಡಿ ಅಳತೆಯ ನಿವೇಶನಗಳ ಬದಲಿಗೆ 30×40 ಅಡಿ ಅಳತೆಯ ನಿವೇಶನಗಳನ್ನು ಒದಗಿಸಲಾಗುವುದು.ತುಮಕೂರು ಜಿಲ್ಲೆಯಲ್ಲಿ ಈಗಾಗಲೇ 20 ಸಾವಿರ ನಿವೇಶನಗಳನ್ನು ಸಿದ್ಧಪಡಿಸಲಾಗಿದೆ. ಹಳ್ಳಿಹಳ್ಳಿಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಅರ್ಹ ಬಡ ಕುಟುಂಬಗಳನ್ನು ಗುರುತಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಪ್ರತಿಯೊಂದು ಬಡ ಕುಟುಂಬಕ್ಕೂ ಸ್ವಂತ ನೆಲೆಯ ಭದ್ರತೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ಸಂಬಂಧಿತ ಸುದ್ದಿಗಳು

ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕುಡಿಯುವ ನೀರು, ವಿದ್ಯುತ್ ಪೂರೈಕೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ
ವಿಜಯಪುರ : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವ…
◷ 21/11/2026
ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ
ಬೆಂಗಳೂರು : ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಸುಬ್ರಮಣ್ಯ ನಗರ ರೈಲ್ವೆ ಸಮಾನಾಂತರ ರಸ್ತೆಯಲ್ಲಿರುವ ಮೈಸೂರು ಲ್ಯಾಂಪ್ಸ್ ರೈಲ್ವೆ ಗೇಟ…
◷ 21/11/2026
ಭಾರತ-ಅಮೆರಿಕ ರಕ್ಷಣಾ ಸಹಕಾರಕ್ಕೆ ಮತ್ತಷ್ಟು ಬಲ
ಚೆನ್ನೈ : ಭಾರತ ಮತ್ತು ಅಮೆರಿಕ ನಡುವಿನ ರಕ್ಷಣಾ ಸಹಕಾರಕ್ಕೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ, ಅಮೆರಿಕ ನೌಕಾಪಡೆಯ ಪೂರೈಕೆ ಹಡಗು…
◷ 20/11/2026
ಪ್ರಗತಿ ಪರಿಶೀಲನಾ ಸಭೆ : ಅಗತ್ಯ ಸೂಚನೆಗಳನ್ನು ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ್
ಬೆಂಗಳೂರು: ಇಂದು ವಿಕಾಸಸೌಧದಲ್ಲಿ ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕ…
◷ 20/11/2026
