ವಿಜಯಪುರ :  ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವ ಎಂ.ಬಿ.ಪಾಟೀಲ್‌ ಅವರು  ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಹಾಗೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.ಆಲಮಟ್ಟಿ ಜಲಾಶಯದಲ್ಲಿರುವ ನೀರಿನ ಸಂಗ್ರಹವನ್ನು ಮುಂದಿನ ಮಳೆಗಾಲದವರೆಗೆ ಸಮರ್ಪಕವಾಗಿ ನಿರ್ವಹಿಸುವುದು ನಮ್ಮ ಆದ್ಯತೆಯಾಗಿದೆ. ಮುಂಬರುವ ಬೇಸಿಗೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಜಿಲ್ಲೆಯ ಯಾವುದೇ ಭಾಗದಲ್ಲೂ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.  ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಕೃಷಿ, ತೋಟಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ, ಬಾಕಿ ಇರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ತುರ್ತಾಗಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಚರ್ಚಿಸಲಾಯಿತು. ಎಲ್ಲ ಬಾಕಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವುದರ ಜತೆಗೆ, ಸರ್ಕಾರದ ಯೋಜನೆಗಳು ಮತ್ತು ಸಾರ್ವಜನಿಕ ಸೇವೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸಭೆಯಲ್ಲಿ ಶಾಸಕರಾದ  ಶಿವಾನಂದ ಪಾಟೀಲ,  ಅಪ್ಪಾಜಿ ನಾಡಗೌಡ,  ಯಶವಂತರಾಯಗೌಡ ಪಾಟೀಲ,  ವಿಠ್ಠಲ ಕಟಕದೊಂಡ,   ಅಶೋಕ ಮನಗೂಳಿ,   ರಾಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ  ಸುನೀಲಗೌಡ ಪಾಟೀಲ,  ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ   ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ   ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.