ಗುಂಡ್ಲುಪೇಟೆ :  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ರೈತರ ಸಮಸ್ಯೆಗಳ ನಿರ್ಲಕ್ಷ್ಯ ಹೆಚ್ಚಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯು ಪಟ್ಟಣದ ಹಳೆಯ ಪ್ರವಾಸಿ ಮಂದಿರದಿಂದ ಆರಂಭಗೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮಾರ್ಗವಾಗಿ ಸಾಗಿ ತಾಲೂಕು ಕಚೇರಿ ಮುಂಭಾಗ ತಲುಪಿತು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರುವರೆ ವರ್ಷಗಳ ಅವಧಿಯಲ್ಲಿ ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಲ್ಲಿ ದಾಖಲೆ ನಿರ್ಮಿಸಿದೆ. ಸುಮಾರು 200ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಬದುಕಿನ ಮೇಲೆ ಹೊರೆ ಹಾಕಿದೆ ಎಂದು ಆರೋಪಿಸಿದರು.ಬಡವರು, ರೈತರು ಹಾಗೂ ಕಾರ್ಮಿಕರ ಪರ ಸರ್ಕಾರ ಎಂದು ಹೇಳಿಕೊಂಡು ಐದು ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್, ಮತ್ತೊಂದೆಡೆ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸಿದರೆ ಹಲವು ವಸ್ತುಗಳ ಬೆಲೆ ಮೂರು ಪಟ್ಟು ಹೆಚ್ಚಾಗಿದೆ. ಬಸ್‌ಗಳ ನಿರ್ವಹಣೆಗೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಗೃಹಲಕ್ಷ್ಮಿ, ಯುವನಿಧಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.ತಾಲೂಕಿನ ರೈತರ ಸಾಗುವಳಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ನಮ್ಮ ಅವಧಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಐದು ಕೋಟಿ ರೂ.ವರೆಗೆ ಅನುದಾನ ನೀಡಿದ್ದೆವು. ಆದರೆ ಈಗ ಕೇವಲ 20 ಲಕ್ಷ ರೂ. ಅನುದಾನ ನೀಡಿ ದೊಡ್ಡ ಸಾಧನೆ ಮಾಡಿದಂತೆ ತೋರಿಸಿಕೊಳ್ಳುತ್ತಿದ್ದಾರೆ. ಬರಗಿ ರಸ್ತೆ ಸೇರಿದಂತೆ ಹಲವು ಕಾಮಗಾರಿಗಳನ್ನು ನಮ್ಮ ಅವಧಿಯಲ್ಲಿ ಕೈಗೊಳ್ಳಲಾಗಿತ್ತು. ಈಗ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ದೂರಿದರು.ತಾಲೂಕಿನಲ್ಲಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲ. ನಿರ್ಮಿತಿ ಕೇಂದ್ರ ಹಾಗೂ ಲ್ಯಾಂಡ್ ಆರ್ಮಿ ಮೂಲಕ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ. ಕಮಿಷನ್ ದಂಧೆ ನಡೆಯುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಸಾರ್ವಜನಿಕರ ಹಣವನ್ನು ಸಮರ್ಪಕವಾಗಿ ಬಳಸಬೇಕು ಎಂದು ಆಗ್ರಹಿಸಿದರು.ಕಮರಹಳ್ಳಿ ಕೆರೆಗೆ ನೀರು ತುಂಬಿಸುವುದು ಸೇರಿದಂತೆ ತಾಲೂಕಿನ ಕೆರೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಸ್ಥಳೀಯ ಶಾಸಕರು ನಿರ್ಲಕ್ಷ್ಯ ವಹಿಸಿದ್ದಾರೆ. ರೈತರು ನೀರಿಗಾಗಿ ಕಾಯುತ್ತಿದ್ದರೂ ಸರ್ಕಾರ ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ. ಅರಣ್ಯ ಇಲಾಖೆಯ ವಿರುದ್ಧ ರೈತರು ಸುಮಾರು 90 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಸಾಗುವಳಿ ಸಮಿತಿ ಅಧ್ಯಕ್ಷರಾಗಿರುವ ಶಾಸಕರಿಂದಲೂ ರೈತರ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿಲ್ಲ ಎಂದು ಟೀಕಿಸಿದರು.ಸರ್ಕಾರಿ ಆಸ್ತಿಗಳ ಒತ್ತುವರಿ, ಕ್ವಾರಿಗಳಿಗೆ ರಸ್ತೆ ನಿರ್ಮಾಣ, ಕಾಮಗಾರಿಗಳಲ್ಲಿನ ಅಕ್ರಮಗಳು ಹಾಗೂ ಕ್ಷೇತ್ರದ ಅಭಿವೃದ್ಧಿ ವಿಚಾರಗಳಲ್ಲಿಯೂ ಆಡಳಿತ ಪಕ್ಷದ ವಿರುದ್ಧ ನಿರಂಜನಕುಮಾರ್ ವಾಗ್ದಾಳಿ ನಡೆಸಿದರು.ಬಿಜೆಪಿ ಮುಖಂಡ ಜಿಡಿಎಲ್ ಸುರೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯ ಶಾಸಕ ಎಚ್.ಎಂ. ಗಣೇಶಪ್ರಸಾದ್ ಅವರು ತಾಲೂಕಿನ ಕೆರೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಯಾವುದೇ ಕಾಳಜಿ ತೋರುತ್ತಿಲ್ಲ. ರೈತರು ನೀರಿಲ್ಲದೆ ಸಾಲದ ಸುಳಿಗೆ ಸಿಲುಕುವ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.ಗಣೇಶೋತ್ಸವದ ಹೆಸರಿನಲ್ಲಿ 30 ಲಕ್ಷ ರೂ. ಖರ್ಚು ಮಾಡಿರುವುದಾಗಿ ಹೇಳಿಕೊಳ್ಳುವ ಶಾಸಕರು, ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಮುಂದಾಗುತ್ತಿಲ್ಲ. ಕಾಮಗಾರಿಗಳನ್ನು ಹೊರಜಿಲ್ಲೆಯ ಗುತ್ತಿಗೆದಾರರಿಗೆ ನೀಡಲಾಗುತ್ತಿದ್ದು, ಕಳಪೆ ಕಾಮಗಾರಿ ಮತ್ತು ಶೇ.25ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ಆರೋಪಗಳಿವೆ. ಮತ ನೀಡಿದ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.ಬಿಜೆಪಿ ಮುಖಂಡ ನವೀನ್ ಮೌರ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನವಿರೋಧಿ, ರೈತವಿರೋಧಿ ಹಾಗೂ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ವಿರುದ್ಧ ಹಲವು ಭ್ರಷ್ಟಾಚಾರದ ಆರೋಪಗಳಿದ್ದು, ರೈತರ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಆಡಳಿತ ಪಕ್ಷದ ನಾಯಕರು ವಿದೇಶ ಪ್ರವಾಸಗಳಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.ಮಹದೇವಪ್ರಸಾದ್ ಮಾತನಾಡಿ, ಚುನಾವಣೆಯಲ್ಲಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಶಾಸಕರು ರೈತರ ಸಮಸ್ಯೆಗಳ ಬಗ್ಗೆ ಕಾಳಜಿ ತೋರುತ್ತಿಲ್ಲ. ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕೆಲಸವನ್ನು ಕೂಡಲೇ ಆರಂಭಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮಗಳಿಗೆ ಭೇಟಿ ನೀಡಲು ಶಾಸಕರಿಗೆ ರೈತರು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಲು ಮತ್ತು ಹಾಲಿನ ಉತ್ಪನ್ನಗಳು, ಪೆಟ್ರೋಲ್, ಡೀಸೆಲ್, ಮದ್ಯ, ಬಸ್ ಪ್ರಯಾಣ ದರ, ಬಸ್ ಪಾಸ್, ಮೆಟ್ರೋ, ಆಟೋ, ಟ್ಯಾಕ್ಸಿ, ವಿದ್ಯುತ್ ಸಂಪರ್ಕ ಶುಲ್ಕ, ನೀರಿನ ದರ, ಆಸ್ತಿ ತೆರಿಗೆ, ಕಟ್ಟಡ ಪರವಾನಗಿ, ವಾಹನ ನೋಂದಣಿ, ಚಾಲನಾ ಪರವಾನಗಿ ಹಾಗೂ ಆಸ್ಪತ್ರೆಗಳ ವಿವಿಧ ಸೇವಾ ಶುಲ್ಕಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದರ ಏರಿಕೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಮಹದೇವಪ್ರಸಾದ್, ಅಗತಗೌಡನಹಳ್ಳಿ ಬಸವರಾಜು, ಹನುಮಶೆಟ್ಟಿ, ಶಿವಪ್ರಸಾದ್, ಸುರೇಶ್, ಡಾ. ನವೀನ್ ಮೌರ್ಯ, ಹಂಗಳ ಪ್ರಣಯ್, ಮಂಗಳಮ್ಮ, ಗೀತಾ, ಸುನೀಲ್ ಮೂಡ್ಲು, ನಾಗುಸ್ವಾಮಿ, ನಮೋ ಮೌರ್ಯ, ಮಹೇಂದ್ರ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.