ಮೈಸೂರಿನ ಸಂವಿಧಾನ ದಿನಾಚರಣೆಗೆ ಚಾಮರಾಜನಗರದಿಂದ 15 ಸಾವಿರ ಜನರ ಭಾಗಿ : ಸಚಿವ ಪುಟ್ಟರಂಗಶೆಟ್ಟಿ ಮಾಹಿತಿ

ಚಾಮರಾಜನಗರ : ಮೈಸೂರಿನ ಮಹಾರಾಜ ಮೈದಾನದಲ್ಲಿ ನ.26ರಂದು ನಡೆಯಲಿರುವ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲೆಯಿಂದ ಸುಮಾರು 15 ಸಾವಿರ ಜನರನ್ನು ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ. ಪುಟ್ಟರಂಗಶೆಟ್ಟಿ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ ದಿನಾಚರಣೆಯನ್ನು ಸರ್ಕಾರ ಈ ಬಾರಿ ಅತ್ಯಂತ ಮಹತ್ವದಿಂದ ಆಚರಿಸುತ್ತಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಜಿಲ್ಲೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ವ್ಯವಸ್ಥೆ ಮಾಡಲಾಗಿದೆ ಎಂದರು.ಜಿಲ್ಲೆಯಿಂದ ಸುಮಾರು 250 ಬಸ್‌ಗಳ ಮೂಲಕ ಸಾರ್ವಜನಿಕರನ್ನು ಮೈಸೂರಿಗೆ ಕರೆದೊಯ್ಯಲು ಯೋಜನೆ ರೂಪಿಸಲಾಗಿದೆ. ಬೆಳಗ್ಗೆ 7ರಿಂದ 8 ಗಂಟೆಯೊಳಗೆ ಬಸ್‌ಗಳು ವಿವಿಧ ಸ್ಥಳಗಳಿಂದ ಹೊರಡಲಿದ್ದು, ಕಾರ್ಯಕ್ರಮ ಬೆಳಗ್ಗೆ 10.30ರಿಂದ 11 ಗಂಟೆಯ ವೇಳೆಗೆ ಆರಂಭವಾಗಲಿದೆ. ಜಿಲ್ಲೆಯಿಂದ 15 ಸಾವಿರ ಜನರ ಭಾಗವಹಿಸುವಿಕೆಗೆ ಗುರಿ ನಿಗದಿಪಡಿಸಲಾಗಿದ್ದು, 15ರಿಂದ 20 ಸಾವಿರ ಜನರು ಭಾಗವಹಿಸುವ ಸಾಧ್ಯತೆಯೂ ಇದೆ ಎಂದು ಹೇಳಿದರು.ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಹಾಗೂ ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದರು. ಚಾಮರಾಜನಗರದಲ್ಲಿ ಬೆಳಗ್ಗೆ 8 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್, ಶಿವಕುಮಾರ ಸ್ವಾಮೀಜಿ ಹಾಗೂ ಬಸವಣ್ಣನವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ, ಸಂವಿಧಾನ ಪಠಣದ ಬಳಿಕ ಅಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿಸಿದರು.ಪ್ರತಿ ವರ್ಷ ರಾಜ್ಯದ ವಿವಿಧ ವಿಭಾಗಗಳಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಬಾರಿ ಮೈಸೂರು ವಿಭಾಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಿ, ಅದರ ಆಶಯಗಳನ್ನು ಪಾಲಿಸಬೇಕು. ಸಂವಿಧಾನ ನಮ್ಮೆಲ್ಲರಿಗೂ ಮಾರ್ಗದರ್ಶನ ನೀಡುವ ಮಹತ್ವದ ದಾಖಲೆಯಾಗಿದೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

ಲಾಲ್ಬಾಗ್ ಉದ್ಯಾನವನದಲ್ಲಿ ಟನಲ್ ರಸ್ತೆ ನಿರ್ಮಾಣ ಆತಂಕಕ್ಕೆ ಸಚಿವ ಕೃಷ್ಣಬೈರೇಗೌಡ ತೆರೆ
ಬೆಂಗಳೂರು : ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಟನಲ್ ರಸ್ತೆ ವಿಚಾರವಾಗಿ ಮಹತ್ವದ ಘೋಷಣೆಯನ್ನು ಮಾಡಿದ್ದು, ಬೆ…
◷ 25/11/2026
ಭಾರತ-ಜರ್ಮನಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಬದ್ಧತೆ
ನವದೆಹಲಿ : ರಕ್ಷಣೆ, ಸುಧಾರಿತ ತಂತ್ರಜ್ಞಾನಗಳು, ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ …
◷ 25/11/2026
ವಿದೇಶ ಪ್ರವಾಸದ ನಡುವೆಯೂ ಆಶಾ ಕಾರ್ಯಕರ್ತೆಯರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ; ಅಧಿವೇಶನದಲ್ಲಿ ಬೇಡಿಕೆಗಳ ಚರ್ಚೆಗೆ ಭರವಸೆ
ಬೆಂಗಳೂರು : ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಆಶಾ ಕಾರ…
◷ 24/11/2026
ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ನಿರಂಜನಕುಮಾರ್ ವಾಗ್ದಾಳಿ; ರೈತರ ಸಮಸ್ಯೆಗಳಿಗೆ ಸ್ಪಂದಿಸದ ಶಾಸಕರ ವಿರುದ್ಧ ಆಕ್ರೋಶ
ಗುಂಡ್ಲುಪೇಟೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ರೈತರ ಸಮಸ್ಯೆಗಳ ನಿರ್ಲ…
◷ 24/11/2026
