ನವದೆಹಲಿ: ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು, ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಲಕ್ಷಣಗಳ ಗುರುತಿಸುವಿಕೆ ಹಾಗೂ ಸರಿಯಾದ ಸಮಯಕ್ಕೆ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರೆ ನೀಡಿದ್ದಾರೆ.ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ  ನಡ್ಡಾ ಅವರು, ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜಾಗೃತಿ ಮತ್ತು ಸೂಕ್ತ ತಪಾಸಣೆ ಅತ್ಯಂತ ಪ್ರಮುಖವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಪ್ರತಿಯೊಬ್ಬರೂ ಶಿಫಾರಸು ಮಾಡಿದಂತೆ ಬಾಯಿ, ಸ್ತನ ಮತ್ತು ಗರ್ಭಕಂಠದ (ಸೆರ್ವಿಕಲ್) ಕ್ಯಾನ್ಸರ್‌ಗಳಂತಹ ಸಾಮಾನ್ಯ ಕ್ಯಾನ್ಸರ್‌ಗಳಿಗೆ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.ತಂಬಾಕು ಮತ್ತು ಮದ್ಯಪಾನದಿಂದ ದೂರವಿರುವುದು, ನಿಯಮಿತ ವ್ಯಾಯಾಮ ಮಾಡುವುದು, ಪೌಷ್ಠಿಕ ಆಹಾರ ಸೇವಿಸುವುದು ಹಾಗೂ ದೇಹದಲ್ಲಿ ಯಾವುದೇ ಅಸಹಜ ಅಥವಾ ಸುದೀರ್ಘವಾದ ರೋಗಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯಕೀಯ ಸಲಹೆ ಪಡೆಯುವುದು ಅಗತ್ಯ ಎಂದು ನಾಗರಿಕರಿಗೆ ಸಲಹೆ ನೀಡಿದ್ದಾರೆ.ಕ್ಯಾನ್ಸರ್ ತಪಾಸಣೆಯ ಕುರಿತು ಹೆಚ್ಚಿನ ಮಾಹಿತಿ ಮತ್ತು ನೆರವಿಗಾಗಿ ಪ್ರತಿಯೊಬ್ಬರೂ ತಮ್ಮ ಹತ್ತಿರದ ಆಯುಷ್ಮಾನ್ ಆರೋಗ್ಯ ಮಂದಿರ ಅಥವಾ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಕೇಂದ್ರ ಸಚಿವರು ತಿಳಿಸಿದ್ದಾರೆ.