ಬಳ್ಳಾರಿ : ಜಿಲ್ಲೆಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಕುರಿತು ಜನಜಾಗೃತಿ ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಬೀದಿ ನಾಟಕ ಮತ್ತು ಆಟೋ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಗುರುವಾರ  ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್. ಹೊಸಮನೆ ಅವರು, ಆಟೋ ಪ್ರಚಾರಕ್ಕೆ ಚಾಲನೆ ನೀಡಿ ಹಾಗೂ ಬೀದಿ ನಾಟಕ ಕಲಾವಿದರ ತಂಡಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು. ಈ ಜಾಗೃತಿ ಜಾಥಾವು ಜಿಲ್ಲೆಯ ಎಲ್ಲಾ ತಾಲೂಕುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಸತತ 11 ದಿನಗಳವರೆಗೆ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಹಂಚುವುದರ ಮೂಲಕ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸಿಂಧೆ ನಂದಿನಿ, ಕಾರ್ಮಿಕ ನಿರೀಕ್ಷಕರಾದ ಪರಶುರಾಮ್ ಮತ್ತು ರಮೇಶ್, ಯೋಜನಾ ನಿರ್ದೇಶಕ ಎ. ಮೌನೇಶ್, ಪೊಲೀಸ್ ಇಲಾಖೆಯ ಲಲಿತಮ್ಮ ಹಾಗೂ ಶಿಕ್ಷಣ ಇಲಾಖೆಯ ಕೋಟ್ರೆಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.