ಮೈಸೂರು: ಬರಗಾಲದ ಪರಿಣಾಮ ಭತ್ತದ ಇಳುವರಿ ಕುಂಠಿತವಾಗಿದ್ದು, ಅಕ್ಕಿ ದಾಸ್ತಾನಿನ ಮೇಲೂ ಪರಿಣಾಮ ಬೀರಿದೆ. ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದರು.ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಭತ್ತ ಬೆಳೆಯಲು ಹೆಚ್ಚಿನ ಪ್ರಮಾಣದ ನೀರು ಅಗತ್ಯವಿದೆ, ಬರಗಾಲದಿಂದ ಭತ್ತದ ಉತ್ಪಾದನೆ ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿರುವ ಪ್ರಕರಣಗಳಲ್ಲಿ ಅಕ್ಕಿ ಮಾತ್ರವಲ್ಲದೆ, ಅಕ್ಕಿ ಸಾಗಿಸುತ್ತಿದ್ದ ಟ್ರಕ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಇಲಾಖೆಯ ಇತಿಹಾಸದಲ್ಲೇ ಕಂಡು ಕೇಳರಿಯದ ಪ್ರಮಾಣದಲ್ಲಿ ಅಕ್ಕಿ ಜಪ್ತಿ ಮಾಡಲಾಗಿದೆ. ಜಪ್ತಿಯಾಗಿರುವ ಅಕ್ಕಿ ಅನ್ನಭಾಗ್ಯ ಯೋಜನೆಗೆ ಸೇರಿದ್ದಾಗಿದೆ ಎಂದು ತಿಳಿಸಿದರು. ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು, ಅಕ್ರಮವಾಗಿ ದಾಸ್ತಾನು ಮಾಡುವುದು ಹಾಗೂ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಪೆಟ್ರೋಲ್‌ನಲ್ಲಿ ಎಥನಾಲ್ ಹೆಚ್ಚಿನ ಪ್ರಮಾಣದಲ್ಲಿ ಮಿಶ್ರಣ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ರಾಜ್ಯ ಸರ್ಕಾರವು ನಾಳೆ ಕೇಂದ್ರ ಸರ್ಕಾರಕ್ಕೆ ಅಧಿಕೃತ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು. ರಾಜ್ಯದ 6 ಪೆಟ್ರೋಲಿಯಂ ಟರ್ಮಿನಲ್‌ಗಳಲ್ಲಿ ಹೆಚ್ಚಿನ ಪ್ರಮಾಣದ ಎಥನಾಲ್ ಮಿಶ್ರಣವಾಗುತ್ತಿರುವ ಬಗ್ಗೆ ತಾಂತ್ರಿಕ ಹಾಗೂ ಪ್ರಯೋಗಾಲಯ ವರದಿಗಳನ್ನು ಸಂಗ್ರಹಿಸಲಾಗಿದೆ. ಈ ಎಲ್ಲ ವರದಿಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಆಧರಿಸಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು. ಇದು ಪೆಟ್ರೋಲ್ ಬಂಕ್‌ಗಳ ಸಮಸ್ಯೆಯಲ್ಲ. ಪೆಟ್ರೋಲಿಯಂ ಟರ್ಮಿನಲ್‌ಗಳಿಂದಲೇ ಹೆಚ್ಚಿನ ಪ್ರಮಾಣದ ಎಥನಾಲ್ ಮಿಶ್ರಣವಾಗುತ್ತಿದೆ. ಇದರಿಂದ ವಾಹನ ಸವಾರರು ಹಾಗೂ ಪೆಟ್ರೋಲ್ ಬಂಕ್ ಮಾಲೀಕರಿಗೂ ಸಮಸ್ಯೆಯಾಗುತ್ತಿದೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು. ಹಾಲು ಹಾಗೂ ಬಸ್ ಪ್ರಯಾಣ ದರ ಏರಿಕೆಗೂ ಎಥನಾಲ್ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ದರ ಏರಿಕೆಗೂ ಒಂದು ತಿಂಗಳ ಮೊದಲೇ ವರದಿಗಳನ್ನು ತರಿಸಿಕೊಂಡಿದ್ದೆ. ಎಲ್ಲ ವರದಿಗಳ ಸತ್ಯಾಸತ್ಯತೆ ತಿಳಿದ ಬಳಿಕ ಬಹಿರಂಗಪಡಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.ಅನ್ನ ಸೇವೆ ಆ್ಯಪ್ ಮೂಲಕ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಿಕೊಳ್ಳುವ ವ್ಯವಸ್ಥೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ ಎಂದು ತಿಳಿಸಿದ ಸಚಿವರು ಈ ಹಿಂದೆ ಆ್ಯಪ್ ಬಳಕೆಗೆ ರಾಜ್ಯದ ವ್ಯಾಪ್ತಿಯಲ್ಲಿ ಮಾತ್ರ ಅವಕಾಶವಿತ್ತು. ಇದೀಗ ದೇಶಾದ್ಯಂತ ವಿಸ್ತರಿಸಲಾಗಿದ್ದು, ಉದ್ಯೋಗದ ನಿಮಿತ್ತ ಬೇರೆ ರಾಜ್ಯಗಳಿಗೆ ತೆರಳಿರುವ ಕಾರ್ಮಿಕರಿಗೂ ಇ-ಕೆವೈಸಿ ಮಾಡಿಸಿಕೊಳ್ಳಲು ಅನುಕೂಲವಾಗಿದೆ ಎಂದರು. ಇ-ಕೆವೈಸಿ ಮಾಡಿಸಲು ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಹಣ ಕೇಳುತ್ತಿರುವ ದೂರುಗಳು ಬಂದಿರುವುದು ಸತ್ಯ. ಈ ಸಂಬಂಧ ಹಣ ಕೇಳಿದ ಸುಮಾರು 12 ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ವ್ಯವಸ್ಥೆಯಲ್ಲಿ ಲೋಪದೋಷಗಳು ಉಂಟಾಗದಂತೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.