ಮೈಸೂರು : ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ  ಡಾ. ಮೂರ್ತಿ .ಎಲ್ ಅವರು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ, ವಿಶ್ವವಿದ್ಯಾನಿಲಯದ ಕುಲಪತಿಗಳು, ರಿಜಿಸ್ಟ್ರಾರ್ ಹಾಗೂ ಆಯೋಗದ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಮಸ್ಯೆಗಳ ಬಗ್ಗೆ ಪರಿಶೀಲನೆ ಹಾಗೂ ಅಧಿಕಾರಿಗಳೋoದಿಗೆ ಚರ್ಚಿಸಿದರು.ಮೈಸೂರು ವಿಶ್ವವಿದ್ಯಾನಿಲಯದ ಮುಖ್ಯಸ್ಥರು ಮತ್ತು ಜಿಲ್ಲಾ ಪಂಚಾಯತ್ ಸಿಇಒ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು, ಈ ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಉಪಕುಲಪತಿಗಳಿಗೆ ಮತ್ತು ಆಯೋಗಕ್ಕೆ ವರದಿ ಸಲ್ಲಿಸಲಿದೆ. ಮೂಲಭೂತ ಸೌಕರ್ಯಗಳು, ವಸತಿ ನಿಲಯಗಳ ನಿರ್ವಹಣೆ, ಪಿಎಚ್‌ಡಿ ವಿದ್ಯಾರ್ಥಿಗಳ ಫೆಲೋಶಿಪ್ ಅನುದಾನ ವಿಳಂಬ, ಲ್ಯಾಪ್‌ಟಾಪ್ ವಿತರಣೆ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿಗಳ ಕುರಿತು ಈ ಸಭೆಯಲ್ಲಿ  ಚರ್ಚೆ ನಡೆಸಲಾಗಿದೆ ಎಂದು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ಹಾಸ್ಟೆಲ್‌ಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ವಸತಿ ನಿಲಯಗಳ ಕೊರತೆ ಗಂಭೀರ ಸಮಸ್ಯೆಯಾಗಿದೆ. 2026-27ನೇ ಸಾಲಿನಲ್ಲಿ 1888 ಪರಿಶಿಷ್ಟ ಜಾತಿ, 497 ಪರಿಶಿಷ್ಟ ವರ್ಗ ಮತ್ತು 812 ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 3192 ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯ ಬಳಸುತ್ತಿದ್ದಾರೆ ಎಂದು ಹೇಳಿದರು.ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರ ಹುದ್ದೆಗಳು ಖಾಲಿ ಇದ್ದು, ನಿರೀಕ್ಷಿತ ಮಟ್ಟದಲ್ಲಿ ಶಿಕ್ಷಕರ ನೇಮಕಾತಿ ಆಗದಿರುವುದು ಮತ್ತೊಂದು ಸಮಸ್ಯೆಯಾಗಿದೆ. ರಾಜ್ಯದ ಸುಮಾರು 20 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗಿದ್ದು, ಆಯೋಗದಲ್ಲಿ ಒಟ್ಟು 4850 ಕೇಸುಗಳು ದಾಖಲಾಗಿವೆ. ಪ್ರತಿ ಗುರುವಾರ ಮತ್ತು ಶುಕ್ರವಾರ ಕೋರ್ಟ್ ಮುಖಾಂತರ ಜಮೀನು ವಿವಾದ, ದೌರ್ಜನ್ಯ ಪ್ರಕರಣಗಳು ಹಾಗೂ ಸರ್ಕಾರಿ ಸೇವೆಯಲ್ಲಿರುವ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುತ್ತಿದೆ ಎಂದು ತಿಳಿಸಿದರು.ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯ ಜೊತೆಗೆ, ಶಿಕ್ಷಕರ ಹಾಗೂ ಬೋಧಕ ಸಿಬ್ಬಂದಿಗಳ ನೇಮಕಾತಿ ಸರಿಯಾಗಿ ಆಗುತ್ತಿಲ್ಲದಿರುವುದು ಮಕ್ಕಳ ವಿದ್ಯಾಭ್ಯಾಸ ಮತ್ತು ಬೆಳವಣಿಗೆಗೆ ಕುಂಠಿತವಾಗಲು ಕಾರಣವಾಗಿದೆ. ಬ್ಯಾಕ್‌ಲಾಗ್ ಹುದ್ದೆಗಳು ಹಾಗೂ ಸರ್ಕಾರದ ಆದೇಶದ ಮೇರೆಗೆ ಆಗಬೇಕಾದ ನೇಮಕಾತಿಗಳು ವಿಳಂಬವಾಗುತ್ತಿದ್ದು, ಇದರಿಂದ ಹೊರಗುತ್ತಿಗೆಯನ್ನು ಹೆಚ್ಚು ಮಾಡಿಕೊಳ್ಳಲಾಗುತ್ತಿರುವುದು ಹೊಣೆಗಾರಿಕೆಯನ್ನು ಕಡಿಮೆ ಮಾಡುತ್ತಿದೆ.  ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಬರಬೇಕಾದ ಅನುದಾನದ ಮೊತ್ತ, ವಿಶೇಷವಾಗಿ ಇಬಿಎಲ್  ಮೊತ್ತವಾದ ಸುಮಾರು  5 ಕೋಟಿ 27 ಲಕ್ಷ ರೂಪಾಯಿಗಳು ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯಾಗುತ್ತಿಲ್ಲ ಎಂದು ತಿಳಿಸಿದರು.  ಸ್ಕಾಲರ್‌ಶಿಪ್ ಹಣವು ನೇರವಾಗಿ ವಿದ್ಯಾರ್ಥಿಗಳ ಖಾತೆಗಳಿಗೆ ಜಮೆಯಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಮತ್ತು ಅಡ್ಮಿಷನ್ ಫೀಸ್‌ಗಳನ್ನು ಕಟ್ಟಲು ತೊಂದರೆಯಾಗುತ್ತಿದೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಸಮಾನವಾಗಿ ಶುಲ್ಕವಿದ್ದರೂ, ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ತಮ್ಮ ಸ್ಕಾಲರ್‌ಶಿಪ್ ಹಣವನ್ನು ಬಳಸಿಕೊಂಡೇ ಶುಲ್ಕ ಕಟ್ಟಬೇಕಾದ ಸಮಸ್ಯೆಯು ಇದೆ ಎಂದರು.ಮಹಿಳಾ ಹಾಸ್ಟೆಲ್‌ಗಳಲ್ಲಿ ಹಾಗೂ ವಿಶ್ವವಿದ್ಯಾಲಯದ ವಿವಿಧ ಕ್ಷೇತ್ರಗಳಲ್ಲಿ ಜಾತಿ ತಾರತಮ್ಯ  ಮತ್ತು ದೌರ್ಜನ್ಯಗಳು ನಡೆಯುತ್ತಿರುವುದು ಗಂಭೀರ ವಿಚಾರವಾಗಿದೆ ಎಂದರು.ಮಾನಸಗಂಗೋತ್ರಿ ಆವರಣದ ಹಾಸ್ಟೆಲ್‌ಗಳಲ್ಲಿ ಒಂದೇ ಕೊಠಡಿಯಲ್ಲಿ 10 ರಿಂದ 12 ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಮೂಲಭೂತ ಸೌಕರ್ಯಗಳ ಕೊರತೆಯಿದೆ. ಹಳೆಯ ಕಟ್ಟಡಗಳ ದುರಸ್ತಿಗೆ ಬದಲಾಗಿ ಹೊಸ ಹಾಸ್ಟೆಲ್ ಕಟ್ಟಡಗಳ ನಿರ್ಮಾಣಕ್ಕೆ ಸುಮಾರು 100 ಕೋಟಿ ಅನುದಾನದ ಅಗತ್ಯವಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.  ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಕಾಲಕ್ಕೆ ತಲುಪದಿರುವುದು ಗಂಭೀರ ವಿಚಾರವಾಗಿದ್ದು, ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪತ್ರ ಬರೆದು ಶೀಘ್ರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಈ ಎಲ್ಲ ವಿಚಾರಗಳ ಕುರಿತು ಉಪಕುಲಪತಿಗಳು, ರಿಜಿಸ್ಟ್ರಾರ್‌ಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಗಿದ್ದು, ಆಯೋಗದ ವತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು  ಹೇಳಿದರು.ಸಭೆಯಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಕಾರ್ಯದರ್ಶಿ ಡಾ. ಎಚ್.ಎಸ್. ಶಿವರಾಮು, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರೊ. ಲೋಕನಾಥ್ ಎನ್.ಕೆ., ಕುಲಸಚಿವರು ಪ್ರೊ. ಎಸ್. ಜೆ. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿಂದ್ಯಾ ಹೆಚ್.ಎಸ್, ಹಾಗೂ ಮೈಸೂರು ವಿಶ್ವವಿದ್ಯಾನಿಲಯದ  ಸಂಶೋಧಕರು,ವಿದ್ಯಾರ್ಥಿಗಳು,ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.