ಮನೀಲಾ: ಶಾಂತಿಯುತ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶದ ಕುರಿತಾದ ಭಾರತದ ದೃಷ್ಟಿಕೋನವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪುನರುಚ್ಚರಿಸಿದ್ದಾರೆ. 11 ರಾಷ್ಟ್ರಗಳ ಒಕ್ಕೂಟವಾದ 'ಆಸಿಯಾನ್' (ASEAN) ಯಾವುದೇ ಪ್ರಾದೇಶಿಕ ವ್ಯವಸ್ಥೆಯ ಕೇಂದ್ರಬಿಂದುವಾಗಿದೆ ಎಂದು ಅವರು ಪ್ರತಿಪಾದಿಸಿದರು.ಫಿಲಿಪೈನ್ಸ್‌ನ ಮನಿಲಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಪೂರ್ವ ಏಷ್ಯಾ ಶೃಂಗಸಭೆಯನ್ನು (EAS) ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಮುಖ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಸವಾಲುಗಳನ್ನು ಎದುರಿಸಲು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮಹತ್ವವನ್ನು ಒತ್ತಿ ಹೇಳಿದರು. ಸ್ವತಂತ್ರ, ಮುಕ್ತ, ಅಂತರ್ಗತ ಮತ್ತು ನಿಯಮಾಧಾರಿತ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಕರೆ ನೀಡಿದ ಅವರು, ಜಾಗತಿಕ ಮಟ್ಟದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಪೂರ್ವ ಏಷ್ಯಾ ಶೃಂಗಸಭೆ ಕೊಡುಗೆ ನೀಡಬೇಕು ಎಂದರು. ಜಾಗತಿಕ ಬಿಕ್ಕಟ್ಟುಗಳು ಮತ್ತು ಸಂಘರ್ಷಗಳು ಪ್ರಪಂಚದಾದ್ಯಂತ ಆಹಾರ, ಇಂಧನ ಮತ್ತು ರಸಗೊಬ್ಬರಗಳ ಪೂರೈಕೆಯ ಮೇಲೆ ಹೇಗೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ ಎಂಬುದನ್ನು ಪ್ರಧಾನಿ ವಿಶೇಷವಾಗಿ ಉಲ್ಲೇಖಿಸಿದರು. ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ನಿರಂತರವಾಗಿ ಗುರಿಯಾಗುತ್ತಿರುವ ವಾಣಿಜ್ಯ ಹಡಗುಗಳು ಮತ್ತು ನಾವಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅವರು ಕರೆ ನೀಡಿದರು.ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷಗಳ ಶಾಂತಿಯುತ ಪರಿಹಾರಕ್ಕಾಗಿ ಕೈಗೊಳ್ಳಲಾಗುತ್ತಿರುವ ಎಲ್ಲಾ ಪ್ರಯತ್ನಗಳಿಗೆ ಭಾರತದ ಬೆಂಬಲವಿದೆ ಎಂದು ಮೋದಿ ಸ್ಪಷ್ಟಪಡಿಸಿದರು. ಇದೇ ವೇಳೆ, ಶಾಂತಿಪ್ರಿಯ ಸಮಾಜಗಳಿಗೆ ಭಯೋತ್ಪಾದನೆಯಿಂದ ಎದುರಾಗುತ್ತಿರುವ ಬೆದರಿಕೆಗಳ ಕುರಿತು ಅವರು ಎಚ್ಚರಿಸಿದರು.