ತುಮಕೂರು : ಕೊರಟಗೆರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಡಿಸಿಎಂ ಡಾ.ಜಿ.ಪರಮೇಶ್ವರ್‌  ಲೋಕಾರ್ಪಣೆಗೊಳಿಸಿದರು.ಕೊರಟಗೆರೆ ಪಟ್ಟಣದಲ್ಲಿ ನಡೆದ ಪ್ರಜಾಸೇವೆ ಅಭಿಯಾನಕ್ಕೂ ಮುನ್ನ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ವತಿಯಿಂದ ನಿರ್ಮಿಸಲಾಗಿರುವ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಬೆಸ್ಕಾಂ ಉಪವಿಭಾಗ ಕಚೇರಿ ಹಾಗೂ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿದರು.ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ವಿದ್ಯಾರ್ಥಿನಿಲಯಕ್ಕೆ 6.50 ಕೋಟಿ ರೂ. ಅನುದಾನ ಒದಗಿಸಲಾಗಿದೆ. ನಾಲ್ಕು ಅಂತಸ್ತಿನ ಈ ಕಟ್ಟಡದಲ್ಲಿ ಒಟ್ಟು 102 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ವ್ಯವಸ್ಥೆಯಿದೆ. ನೆಲಮಹಡಿಯಲ್ಲಿ ವಾರ್ಡನ್ ಕೊಠಡಿ, ಅಡುಗೆಮನೆ, ಊಟದ ಹಾಲ್, ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಕೊಠಡಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಉಳಿದ ಮಹಡಿಗಳಲ್ಲಿ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಕೊಠಡಿಗಳು, ಸ್ನಾನಗೃಹ ಹಾಗೂ ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದರು.ಕೊರಟಗೆರೆ ಪಟ್ಟಣದ ಕೆಪಿಟಿಸಿಎಲ್ ಆವರಣದಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಹಾಗೂ ಒಎಂ-1 ಮತ್ತು ಒಎಂ-2 ವಿಭಾಗಗಳ ಕಚೇರಿ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಪೂರಕ ಕಾಮಗಾರಿಗಳಿಗೆ 2.44 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಿಂದ ವಿದ್ಯುತ್ ಇಲಾಖೆಯ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಅನುಕೂಲವಾಗುವುದರ ಜತೆಗೆ ಸಾರ್ವಜನಿಕರಿಗೆ ವಿದ್ಯುತ್ ಸಂಬಂಧಿತ ಸೇವೆಗಳನ್ನು ಸುಗಮವಾಗಿ ಒದಗಿಸಲು ನೆರವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಬಸ್ ತಂಗುದಾಣವೂ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದೆ.ಇದೇ ಸಂದರ್ಭದಲ್ಲಿ ವಿವಿಧ ಸರ್ಕಾರಿ ಯೋಜನೆಗಳ 76 ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದೆ. ವಿಶೇಷಚೇತನರಿಗೆ ದ್ವಿಚಕ್ರ ವಾಹನಗಳು, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮೊಬೈಲ್ ಕ್ಯಾಂಟೀನ್ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದ್ದೇನೆ. ಈ ಸೌಲಭ್ಯಗಳು ಫಲಾನುಭವಿಗಳ ಸ್ವಾವಲಂಬನೆ ಹಾಗೂ ಜೀವನೋಪಾಯಕ್ಕೆ ನೆರವಾಗಲಿವೆ ಎಂದು ತಿಳಿಸಿದರು.ಕೊರಟಗೆರೆ ಕ್ಷೇತ್ರದಲ್ಲಿ ಶಿಕ್ಷಣ, ವಿದ್ಯುತ್, ಸಾರಿಗೆ ಸೇರಿದಂತೆ ಮೂಲಸೌಕರ್ಯಗಳನ್ನು ಬಲಪಡಿಸುವುದರ ಜೊತೆಗೆ, ಸರ್ಕಾರಿ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ನನ್ನ ಆದ್ಯತೆಯಾಗಿದೆ. ಕ್ಷೇತ್ರದ ಜನರ ಅಗತ್ಯಗಳಿಗೆ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಮುಂದುವರಿಸಲು ಬದ್ಧನಾಗಿದ್ದೇನೆ ಎಂದು ಹೇಳಿದರು.