ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ವಿಕಲಚೇತನ ಮಕ್ಕಳ ಭವಿಷ್ಯ ರೂಪಿಸುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು,  ಅವರಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ, ಉತ್ತಮ ಭವಿಷ್ಯ ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.ಕೆ.ಆರ್.ನಗರ ಪಟ್ಟಣದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಿದ್ದ  ವಿಕಲ ಚೇತನ ಮಕ್ಕಳ ಉಚಿತ ವೈದ್ಯಕೀಯ ಮೌಲ್ಯಾಂಕನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾನ್ಯ ಮಕ್ಕಳನ್ನು ಬೆಳೆಸುವುದೇ ಪೋಷಕರಿಗೆ ಸವಾಲಿನ ಕೆಲಸ. ಇಂತಹ ಸಂದರ್ಭದಲ್ಲಿ ಅಂಗವಿಕಲ ಮಕ್ಕಳ ಆರೈಕೆ, ಪಾಲನೆ ಮತ್ತು ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಪೋಷಕರ ಸೇವೆ ಶ್ಲಾಘನೀಯ. ಅವರ ತ್ಯಾಗ ಮತ್ತು ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.  ಈ ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪೋಷಕರು ಅವುಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮಕ್ಕಳ ಆಸಕ್ತಿ, ಸಾಮರ್ಥ್ಯ ಹಾಗೂ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಅಗತ್ಯವಾದ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಬೇಕು. ಬುದ್ಧಿವಂತಿಕೆ ಹಾಗೂ ಪ್ರತಿಭೆಯಲ್ಲಿ ಅಂಗವಿಕಲ ಮಕ್ಕಳು ಸಾಮಾನ್ಯ ಮಕ್ಕಳಿಗಿಂತಲೂ ಮುಂದಿರಬಲ್ಲರು.ಅವರ ಸಾಮರ್ಥ್ಯವನ್ನು ಗುರುತಿಸಿ ಬೆಳೆಸುವುದು ಅಗತ್ಯ ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿಆರ್.ಕೃಷ್ಣಪ್ಪ ಮಾತನಾಡಿ, ಮೈಸೂರು ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕಿ ಮೀನಾಕುಮಾರಿ ಪಾಟೀಲ್, ಕ್ಷೇತ್ರ ಸಮನ್ವಯಾಧಿಕಾರಿ ವೆಂಕಟೇಶ್ ಮಾತನಾಡಿದರು,  ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಈ. ಉಮೇಶ್, ಇಸಿಒ ದಾಸಪ್ಪ, ಬಿಸಿಯೂಟ ಸಹಾಯಕ ನಿರ್ದೇಶಕ ಸ್ವಾಮಿಗೌಡ, ಕೆ.ಆರ್.ನಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎನ್.ಸ್ವಾಮಿ, ಸಾಲಿಗ್ರಾಮ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಕೆ.ಜಗದೀಶ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂತೋಷ್ ಉಪಸ್ಥಿತರಿದ್ದರು.