ಧಾರವಾಡ : ವಿದ್ಯಾರ್ಥಿಗಳಿಗೆ ಕೇವಲ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಶಿಕ್ಷಣ ನೀಡುವುದಷ್ಟೇ ಶಿಕ್ಷಣ ಇಲಾಖೆಯ ಉದ್ದೇಶವಾಗಬಾರದು. ಅವರು ಉದ್ಯೋಗಾರ್ಹರಾಗುವ ಜೊತೆಗೆ ಸ್ವಯಂ ಉದ್ಯೋಗ, ಉದ್ಯಮಶೀಲತೆ ಹಾಗೂ ಕೃಷಿ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡರೂ ತಮ್ಮ ಜ್ಞಾನದಿಂದ ಅಭಿವೃದ್ಧಿ ಸಾಧಿಸುವಂತಹ ಗುಣಮಟ್ಟದ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಸಾಧಿಸಲು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಅವರು ಹೇಳಿದರು.ಅವರು ಇಂದು  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಧಾರವಾಡ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಶೈಕ್ಷಣಿಕ ಪರಿಶೀಲನಾ ಸಭೆ ಉದ್ದೇಶಿಸಿ, ಮಾತನಾಡಿದರು.ಕಳೆದ ಮೂರು-ನಾಲ್ಕು ವರ್ಷಗಳ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶಗಳನ್ನು ಗಮನಿಸಿದಾಗ ಕಡಿಮೆ ಫಲಿತಾಂಶ ದಾಖಲಿಸಿದ ಶಾಲಾ-ಕಾಲೇಜುಗಳ ಪ್ರಾಂಶುಪಾಲರನ್ನು ಕರೆಸಿ ನಿರಂತರವಾಗಿ ಸಭೆ ನಡೆಸಿ ಚರ್ಚಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಎಲ್ಲ ಪಿಯು ಕಾಲೇಜುಗಳ ಪ್ರಾಂಶುಪಾಲರನ್ನು ಒಟ್ಟಿಗೆ ಕರೆಸಿ ಫಲಿತಾಂಶ ಸುಧಾರಣೆ ಕುರಿತು ಚರ್ಚಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶದಲ್ಲಿ ಸುಧಾರಣೆ ಕಂಡುಬಂದಿದೆ. ಆದರೆ ಉತ್ತೀರ್ಣ ಪ್ರಮಾಣ, ವಿದ್ಯಾರ್ಥಿಗಳು ಗಳಿಸಿದ ಅಂಕಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದಲ್ಲಿ ಇನ್ನಷ್ಟು ವಿಶ್ಲೇಷಣೆ ನಡೆಸಬೇಕಾಗಿದೆ ಎಂದು ಅವರು ಹೇಳಿದರು. ಪ್ರಸ್ತುತ ಹಲವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಿಯು ಕಾಲೇಜುಗಳಲ್ಲಿ ಶೇ.70ಕ್ಕಿಂತ ಕಡಿಮೆ ಫಲಿತಾಂಶ ದಾಖಲಾಗಿದೆ. ಅದರಲ್ಲೂ ಸರ್ಕಾರಿ ಪಿಯು ಕಾಲೇಜುಗಳ ಫಲಿತಾಂಶ ಸುಧಾರಣೆಗೆ ಮೊದಲ ಆದ್ಯತೆ ನೀಡಬೇಕು. ಮಿಷನ್ 100 ಅಡಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಬೇಕು. ಮಿಷನ್ 60 ಅಡಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಶೇ.60ಕ್ಕಿಂತ ಹೆಚ್ಚು ಅಂಕ ಪಡೆಯುವಂತೆ ಪ್ರಯತ್ನಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಶೇ.83ರಷ್ಟು ಫಲಿತಾಂಶ ಸಾಧಿಸಲಾಗಿದ್ದು, ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲು ಅವಕಾಶವಿದೆ ಎಂದು ತಿಳಿಸಿದರು.ವಿದ್ಯಾರ್ಥಿಯೊಬ್ಬ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಆತನ ಜೀವನದಲ್ಲಿ ಮಹತ್ವದ ಬದಲಾವಣೆ ಕಾಣಬಹುದು. ಶಿಕ್ಷಣ ಪಡೆದವರು ಮತ್ತು ಶಿಕ್ಷಣದಿಂದ ವಂಚಿತರಾದವರ ಜೀವನದಲ್ಲಿ ಸಾಕಷ್ಟು ವ್ಯತ್ಯಾಸವಿರುತ್ತದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದು ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಣ ಪಡೆದವರು ಯಾವುದೇ ಉದ್ಯೋಗ ಅಥವಾ ವೃತ್ತಿಯಲ್ಲಿ ತೊಡಗಿಸಿಕೊಂಡರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಸುಧಾರಣೆ ತರುವ ಸಾಮಥ್ರ್ಯ ಹೊಂದಬೇಕು ಎಂದರು.ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆಗೆ ಶಿಕ್ಷಕರು ಮುಂದಾಗಬೇಕು. ಶಿಕ್ಷಣ ಇಲಾಖೆಯ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ. ಇತರೆ ಇಲಾಖೆಗಳ ವ್ಯಾಪ್ತಿಯಲ್ಲಿ 18 ವರ್ಷ ಮೇಲ್ಪಟ್ಟ ಜನರ ಸಮಸ್ಯೆಗಳ ಕುರಿತು ಧ್ವನಿ ಎತ್ತುವವರಿರುತ್ತಾರೆ. ಆದರೆ ಶಿಕ್ಷಣ ಇಲಾಖೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರುತ್ತಾರೆ. ಅವರು ಮತ ಬ್ಯಾಂಕ್ ಅಲ್ಲದ ಕಾರಣ ಅವರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವವರು ಕಡಿಮೆ. ಆದ್ದರಿಂದ ಶಿಕ್ಷಕರು ಮತ್ತು ಪ್ರಾಂಶುಪಾಲರು ವಿದ್ಯಾರ್ಥಿಗಳ ಶಿಕ್ಷಣ, ಹಕ್ಕುಗಳು ಹಾಗೂ ರಕ್ಷಣೆಯ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಅವರು ಹೇಳಿದರು. ಪ್ರತಿ ಕಾಲೇಜಿನ ಪ್ರವೇಶಾತಿ ವಿವರಗಳನ್ನು ಕಾಲೇಜುವಾರು ಸಿದ್ಧಪಡಿಸಿ, ಕಡಿಮೆ ಪ್ರವೇಶಾತಿ ಹೊಂದಿರುವ ಕಾಲೇಜುಗಳನ್ನು ಗುರುತಿಸಬೇಕು. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಜೊತೆಗೆ ಖಾಸಗಿ ಕಾಲೇಜುಗಳ ಮಾಹಿತಿಯನ್ನೂ ಸಂಗ್ರಹಿಸಬೇಕು. ಕಡಿಮೆ ಪ್ರವೇಶಾತಿಗೆ ಕಾರಣಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೇವಲ ಸಭೆ ನಡೆಸಿ ಫಲಿತಾಂಶ ಸುಧಾರಿಸುವಂತೆ ಹೇಳಿ ಹೋಗುವುದರಿಂದ ಯಾವುದೇ ಪ್ರಯೋಜನವಿಲ್ಲ. ಕಠಿಣ ಪ್ರಶ್ನೆಗಳನ್ನು ಕೇಳಬೇಕು ಹಾಗೂ ಅಗತ್ಯವಿದ್ದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಆಗ ಮಾತ್ರ ನಿಜವಾದ ಸುಧಾರಣೆ ಸಾಧ್ಯ ಎಂದು ಅವರು ಹೇಳಿದರು. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಮತ್ತು ಶೈಕ್ಷಣಿಕ ಸಾಧನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ಮಾಡಬೇಕು. ಪ್ರಸ್ತುತ ಶೇ.29 ರಷ್ಟಿರುವ ಸಾಧನೆಯನ್ನು ಶೇ.35 ರಿಂದ 38 ರವರೆಗೆ ಹೆಚ್ಚಿಸುವ ಗುರಿ ಹೊಂದಬೇಕು. ಕಳೆದ ವರ್ಷಕ್ಕಿಂತ ಈ ವರ್ಷ ಶೇ.5 ರಿಂದ 10 ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಅಥವಾ ಕಾಲೇಜಿಗೆ ಬರುತ್ತಿಲ್ಲ ಎಂಬ ಕಾರಣಗಳನ್ನು ಮುಂದಿಟ್ಟು ಸುಮ್ಮನಿರಬಾರದು. ಇರುವ ಪರಿಸ್ಥಿತಿಯಲ್ಲಿಯೇ ವಿದ್ಯಾರ್ಥಿಗಳ ಕಲಿಕೆಯಲ್ಲಿ ಸುಧಾರಣೆ ತರಲು ಶಿಕ್ಷಕರು ಹೆಚ್ಚಿನ ಪ್ರಯತ್ನ ಮಾಡಬೇಕು ಎಂದರು.ಕನ್ನಡ ಮಾಧ್ಯಮದಿಂದ ಇಂಗ್ಲಿಷ್ ಅಥವಾ ಬೇರೆ ಮಾಧ್ಯಮಕ್ಕೆ ಬದಲಾದ ವಿದ್ಯಾರ್ಥಿಗಳಿಗೆ ಆರಂಭದಲ್ಲಿ ಕಲಿಕೆಯಲ್ಲಿ ಸಮಸ್ಯೆಗಳು ಎದುರಾಗುವುದು ಸಹಜ. ಇದು ಒಂದೆರಡು ಕಾಲೇಜುಗಳಿಗೆ ಸೀಮಿತವಾದ ಸಮಸ್ಯೆಯಲ್ಲ. ರಾಜ್ಯ ಹಾಗೂ ದೇಶದ ವಿವಿಧೆಡೆ ಕಂಡುಬರುವ ಸಮಸ್ಯೆಯಾಗಿದೆ. ಹೀಗಾಗಿ ಮಾಧ್ಯಮ ಬದಲಾದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತ್ಯೇಕವಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು. ಈಗಾಗಲೇ ಶಾಲಾ ಹಂತದಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಪಿಯು ಕಾಲೇಜುಗಳಲ್ಲಿಯೂ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಿ ವಿಶೇಷ ಸಭೆ ಹಾಗೂ ಕಲಿಕಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು. ಕಡಿಮೆ ಫಲಿತಾಂಶ ದಾಖಲಿಸಿರುವ ಸರ್ಕಾರಿ ಕಾಲೇಜುಗಳ 7 ಹಾಗೂ ಅನುದಾನಿತ ಕಾಲೇಜುಗಳ 11 ಕಾಲೇಜುಗಳನ್ನು ಗುರುತಿಸಲಾಗಿದೆ. ಅನುದಾನರಹಿತ ಕಾಲೇಜುಗಳಲ್ಲಿನ ಕಡಿಮೆ ಸಾಧನೆ ದಾಖಲಿಸಿರುವ ಕಾಲೇಜುಗಳನ್ನೂ ಪರಿಶೀಲಿಸಲಾಗುವುದು. ಉತ್ತಮ ಫಲಿತಾಂಶ ನೀಡುತ್ತಿರುವ ಕಾಲೇಜುಗಳ ಪ್ರಾಂಶುಪಾಲರನ್ನು ಅನಗತ್ಯವಾಗಿ ಸಭೆಗೆ ಕರೆಸುವ ಬದಲು, ಕಡಿಮೆ ಫಲಿತಾಂಶ ದಾಖಲಿಸಿರುವ ಕಾಲೇಜುಗಳ ಮೇಲೆ ವಿಶೇಷ ಗಮನಹರಿಸಲಾಗುವುದು. ಅಂತಹ ಕಾಲೇಜುಗಳಿಗೆ ಭೇಟಿ ನೀಡಿ, ಅಲ್ಲಿನ ಶೈಕ್ಷಣಿಕ ಚಟುವಟಿಕೆಗಳು ಮತ್ತು ಫಲಿತಾಂಶದ ಕುರಿತು ವಿವರವಾಗಿ ಪರಿಶೀಲನೆ ನಡೆಸಲಾಗುವುದು. ಪ್ರಾಂಶುಪಾಲರು ಈ ಪರಿಶೀಲನೆಗೆ ಸಿದ್ಧರಾಗಿರಬೇಕು ಎಂದು ಅವರು ಎಚ್ಚರಿಸಿದರು. ಪಿಸಿಎಂಬಿ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದ್ದು, ಪರೀಕ್ಷೆಗೆ ಮುನ್ನ ಲಭ್ಯವಿರುವ ಎರಡು-ಮೂರು ತಿಂಗಳ ಅವಧಿಯಲ್ಲಿ ಅವುಗಳ ಕುರಿತು ಸಮರ್ಪಕ ಅಭ್ಯಾಸ ಮಾಡಿಸಬೇಕು. ಕಾಲೇಜುಗಳಲ್ಲಿ ಶೇ.100 ರಷ್ಟು ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ವಿಶೇಷ ಗಮನಹರಿಸಬೇಕು. ಪ್ರತಿಯೊಂದು ಕಾಲೇಜು ಶೇ.100 ರಷ್ಟು ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಒಟ್ಟಾಗಿ ಪ್ರಯತ್ನಿಸಬೇಕು ಎಂದರು.ಇಂಟಿಗ್ರೇಟೆಡ್ ಸಿಇಟಿ ತರಗತಿಗಳನ್ನು ನಡೆಸುತ್ತಿರುವ ಏಳು ಕಾಲೇಜುಗಳ ಕಾರ್ಯಚಟುವಟಿಕೆಗಳನ್ನೂ ಪರಿಶೀಲಿಸಲಾಗುವುದು. ಸಿಇಟಿ ತರಗತಿಗಳನ್ನು ನಿಯಮಿತವಾಗಿ ನಡೆಸಬೇಕು. ವಿದ್ಯಾರ್ಥಿಗಳು ಯಾವುದೇ ತರಗತಿಯನ್ನು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ಸಿಇಟಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪರಿಶ್ರಮ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಮುಂದೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಿದರೂ ಅವರಿಗೆ ಶಿಕ್ಷಣ ನೀಡಿದ ಶಿಕ್ಷಕರನ್ನು ನೆನಪಿಸಿಕೊಳ್ಳುತ್ತಾರೆ ಎಂದರು.ಕಾಲೇಜುಗಳ ಉತ್ತಮ ಫಲಿತಾಂಶ ಮತ್ತು ಶೈಕ್ಷಣಿಕ ವಾತಾವರಣ ರೂಪಿಸುವಲ್ಲಿ ಪ್ರಾಂಶುಪಾಲರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಾಂಶುಪಾಲರು ಶಿಸ್ತಿನಿಂದ ಕಾರ್ಯನಿರ್ವಹಿಸಿದರೆ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿಯೂ ಅದೇ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಕಾಲೇಜುಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ತರಗತಿಗಳು ನಡೆಯಬೇಕು. ಉಪನ್ಯಾಸಕರು ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಬೇಕು. ಪ್ರಾಂಶುಪಾಲರು ಕೂಡ ನಿಯಮಿತವಾಗಿ ಕಾಲೇಜಿನಲ್ಲಿ ಹಾಜರಿದ್ದು, ಮುಂಚೂಣಿಯಲ್ಲಿ ನಿಂತು ಕಾಲೇಜಿನ ನಿರ್ವಹಣೆ ಮಾಡಬೇಕು. ಹಾಜರಾತಿ ಸುಧಾರಣೆ ಕುರಿತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.ಕೆಲವು ಗ್ರಾಮಗಳಲ್ಲಿ ಒಂದೇ ಕ್ಯಾಂಪಸ್‍ನಲ್ಲಿ ಬಾಲಕರ ಮತ್ತು ಬಾಲಕಿಯರ ಶಾಲೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿವೆ. ಕೆಲವು ಗ್ರಾಮಗಳಲ್ಲಿ ಮೂರು-ನಾಲ್ಕು ಶಾಲೆಗಳಿದ್ದು, ಪ್ರತಿ ಶಾಲೆಯಲ್ಲಿಯೂ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿದ್ದಾರೆ. ಒಂದೊಂದು ಶಾಲೆಯಲ್ಲಿ 20 ವಿದ್ಯಾರ್ಥಿಗಳಿದ್ದರೂ ಪ್ರತ್ಯೇಕ ಶಿಕ್ಷಕರ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದೆಡೆ ಶಿಕ್ಷಕರ ಕೊರತೆಯ ಸಮಸ್ಯೆಯೂ ಇದೆ. ಹೀಗಾಗಿ ಇಂತಹ ಶಾಲೆಗಳನ್ನು ವಿಲೀನಗೊಳಿಸುವ ಅಥವಾ ಸಮರ್ಪಕವಾಗಿ ನಿರ್ವಹಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗುವದು ಎಂದು ಅವರು ಹೇಳಿದರು.ಹೊಸ ಶಿಕ್ಷಕರ ನೇಮಕಾತಿ ತಮ್ಮ ವ್ಯಾಪ್ತಿಯಲ್ಲಿ ಇಲ್ಲದಿದ್ದರೂ, ಶಿಕ್ಷಕರು ಹೆಚ್ಚುವರಿಯಾಗಿರುವ ಶಾಲೆಗಳಿಂದ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ನಿಯೋಜಿಸುವ ಜವಾಬ್ದಾರಿ ಇದೆ. ಈ ಕುರಿತು ಅಧ್ಯಯನ ನಡೆಸಿ, ಪ್ರಸ್ತುತ ವ್ಯವಸ್ಥೆಯಲ್ಲಿಯೇ ಸುಧಾರಣೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದರು. ವಿದ್ಯಾರ್ಥಿಗಳ ಭವಿಷ್ಯ ಮತ್ತು ಹಿತದೃಷ್ಟಿಯಿಂದ ಅಗತ್ಯವಿರುವ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂದೆ ಸರಿಯುವುದಿಲ್ಲ. ಯಾವುದೇ ರೀತಿಯ ಒತ್ತಡಕ್ಕೂ ಮಣಿಯದೆ ವಿದ್ಯಾರ್ಥಿಗಳ ಒಳ್ಳೆಯದಕ್ಕಾಗಿ ನಿರ್ಧಾರ ಕೈಗೊಳ್ಳಲಾಗುವುದು. ಶಿಕ್ಷಕರು ಮತ್ತು ಪ್ರಾಂಶುಪಾಲರು ಈಗಾಗಲೇ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇನ್ನಷ್ಟು ಹೆಚ್ಚುವರಿ ಪ್ರಯತ್ನಗಳನ್ನು ಮಾಡಿದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿದೆ ಎಂದು ಅವರು ಹೇಳಿದರು.ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಂಬ ಭೇದವಿಲ್ಲದೆ ಎಲ್ಲ ಶಿಕ್ಷಣ ಸಂಸ್ಥೆಗಳೂ ವಿದ್ಯಾರ್ಥಿಗಳ ಹಾಗೂ ಸಮಾಜದ ಅಭಿವೃದ್ಧಿಗಾಗಿ ಒಟ್ಟಾಗಿ ಶ್ರಮಿಸಬೇಕು. ಸಮಾಜದಲ್ಲಿ ಇಂಜಿನೀಯರ್, ವೈದ್ಯ, ಅಧಿಕಾರಿಗಳು ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿದ ವ್ಯಕ್ತಿಯ ಹಿಂದೆ ಶಿಕ್ಷಕರ ಮಾರ್ಗದರ್ಶನ ಮತ್ತು ಪರಿಶ್ರಮ ಇರುತ್ತದೆ. ಒಬ್ಬ ಯಶಸ್ವಿ ವ್ಯಕ್ತಿಯ ಹಿಂದೆ ಒಬ್ಬ ಶಿಕ್ಷಕರ ಕೊಡುಗೆ ಇದ್ದೇ ಇರುತ್ತದೆ ಎಂದು ಅವರು ಹೇಳಿದರು.ಸಭೆಯಲ್ಲಿ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ. ಉಪನಿರ್ದೇಶಕಿ ತೇಜಸ್ವಿನಿ ನಾರಾಯಣಕರ,  ಮುಖ್ಯ ಯೋಜನಾಧಿಕಾರಿ ದೀಪಕ ಮಾಡಿವಾಳರ ಸೇರಿದಂತೆ  ಅಧಿಕಾರಿಗಳು ಮತ್ತು ಧಾರವಾಡ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು