ಗುಂಡ್ಲುಪೇಟೆ :  ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಾಲೂಕಿನ ತ್ರಿಪುರ ಸುಂದರಿ ಕಲ್ಯಾಣ ಮಂಟಪದ ಬಳಿ ಬುಧವಾರ ರಾತ್ರಿ ನಡೆದಿದೆ.ತಾಲೂಕಿನ ಚಿಕ್ಕಕವಲಂದೆ ಗ್ರಾಮದ ಗುರುಸ್ವಾಮಿ (ಮೃತ) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಅಣ್ಣತಮ್ಮಂದಿರಾದ ಗುರುಸ್ವಾಮಿ ಹಾಗೂ ಮಂಜು ಬೈಕ್ (ಕೆಎ 55 ಕೆ 3325)ನಲ್ಲಿ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತ್ರಿಪುರ ಸುಂದರಿ ಕಲ್ಯಾಣ ಮಂಟಪದ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಬೈಕ್ ಸವಾರ ಗುರುಸ್ವಾಮಿ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಮಂಜು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

ರಾಷ್ಟ್ರೀಯ ಹೆದ್ದಾರಿ-766ರ ಕಾಮಗಾರಿ ಸುಮಾರು ಒಂದು ವರ್ಷದಿಂದ ನಡೆಯುತ್ತಿದ್ದರೂ, ಮಂದಗತಿಯಲ್ಲಿ ಹಾಗೂ ಅವೈಜ್ಞಾನಿಕವಾಗಿ ಸಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಸ್ಥಳಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಹಾಗೂ ರಸ್ತೆಯ ವಿನ್ಯಾಸದಲ್ಲಿನ ಲೋಪಗಳು ಅಪಘಾತಗಳಿಗೆ ಕಾರಣವಾಗುತ್ತಿವೆ ಎಂದು ಆರೋಪಿಸಿದ್ದಾರೆ.ಹೆದ್ದಾರಿ ಕಾಮಗಾರಿಯಲ್ಲಿನ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜನರು ಬಲಿಯಾಗಬೇಕು ಎಂದು ಪ್ರಶ್ನಿಸಿರುವ ಸಾರ್ವಜನಿಕರು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕಾಮಗಾರಿಯನ್ನು ವೈಜ್ಞಾನಿಕವಾಗಿ ಹಾಗೂ ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ವಾಹನ ಸವಾರರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.