ಗುಂಡ್ಲುಪೇಟೆ : ತಾಲೂಕಿನ ಶಿವಪುರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ 800ಕ್ಕೂ ಹೆಚ್ಚು ಬಾಳೆಗಿಡಗಳನ್ನು ತುಳಿದು ನಾಶಪಡಿಸಿವೆ. ಅಲ್ಲದೆ, ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕೊಯ್ಲಿಗೆ ಬಂದ ಟೊಮೆಟೊ ಬೆಳೆ ಹಾಗೂ ಮತ್ತೊಂದು ಎಕರೆ ಪ್ರದೇಶದಲ್ಲಿದ್ದ ಮುಸುಕಿನ ಜೋಳದ ಬೆಳೆಯನ್ನೂ ಹಾನಿಗೊಳಿಸಿವೆ.ಗ್ರಾಮದ ಪುಟ್ಟಸ್ವಾಮಿ, ಪುಟ್ಟರಾಜು ಹಾಗೂ ಗೋವಿಂದಯ್ಯ ಅವರಿಗೆ ಸೇರಿದ ಜಮೀನುಗಳಲ್ಲಿ ಬೆಳೆ ನಾಶವಾಗಿದ್ದು, ಕೃಷಿ ಪರಿಕರಗಳಿಗೂ ಹಾನಿಯಾಗಿದೆ. ಸಾಲ ಮಾಡಿ ಕೃಷಿ ಚಟುವಟಿಕೆ ನಡೆಸಿದ್ದ ರೈತರು ಕಾಡಾನೆಗಳ ದಾಳಿಯಿಂದ ಭಾರಿ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಬೆಳೆ ನಾಶದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು. ನಿರಂತರವಾಗಿ ನಡೆಯುತ್ತಿರುವ ಕಾಡಾನೆಗಳ ಹಾವಳಿಗೆ ಶಾಶ್ವತ ಕಡಿವಾಣ ಹಾಕಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.