ಆಕ್ಲೆಂಡ್‌ : ಟೀಮ್‌ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ   ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಮತ್ತೊಂದು ಐತಿಹಾಸಿಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿ 13 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ 186 ರನ್‌ ಗುರಿಯನ್ನು ಹಿಂಬಾಲಿಸಿದ ಭಾರತದ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಅರ್ಧಶತಕದ ಸಮೀಪ ತಲುಪಿದ್ದ ಅವರು ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ.ಏಕದಿನ ಕ್ರಿಕೆಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 12,662 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ 9,747 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ 7,774 ರನ್ ಹಾಗೂ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ 6,504 ರನ್ ಗಳಿಸಿ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.