ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
NEET-UG ಮರುಪರೀಕ್ಷೆ ನಡೆಸುವಂತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸುಪ್ರೀಂ ಪೀಠ, ಪರೀಕ್ಷೆ ನಡೆಸುವಲ್ಲಿ ವ್ಯವಸ್ಥಿತ ದೋಷಗಳಿವೆ. ಇದರಿಂದ 155 ಅಭ್ಯರ್ಥಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದೆ.
ನೀಟ್ ಪರೀಕ್ಷೆಯನ್ನು ಮತ್ತೆ ನಡೆಸುವುದೇ ಸರಿಯಾದ ಪರಿಹಾರ ಅಲ್ಲ. ಹಾಗೆ ಮಾಡಿದರೆ 24 ಲಕ್ಷ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಹೇಳಿದರು. ಮರು ಪರೀಕ್ಷೆ ನಡೆಸದಿದ್ದರೆ ನೀಟ್‌ನ ಪಾವಿತ್ರ್ಯತೆಗೆ ಧಕ್ಕೆಯಾಗುತ್ತದೆ ಎಂಬ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಒಪ್ಪಲಿಲ್ಲ. ಈ ತೀರ್ಪಿನ ಆಕ್ಷೇಪಣೆಗಳನ್ನು ಆಗಸ್ಟ್ 21 ರಂದು ಆಲಿಸಲಾಗುವುದು ಎಂದು ಅವರು ತಿಳಿಸಿದರು.
ನೀಟ್ ಪರೀಕ್ಷೆಯನ್ನು ಮತ್ತೆ ನಡೆಸುವುದರಿಂದ ಅಡ್ಮಿಷನ್, ವೈದ್ಯಕೀಯ ಶಿಕ್ಷಣದ ಕೋರ್ಸ್‌ನ ಮೇಲೆ ಪರಿಣಾಮ ಬೀರುತ್ತದೆ. ಭವಿಷ್ಯದಲ್ಲಿ ಅರ್ಹ ವೈದ್ಯಕೀಯ ವೃತ್ತಿಪರರ ಲಭ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸೀಟುಗಳ ಹಂಚಿಕೆಯಲ್ಲಿ ಗಂಭೀರವಾಗಿ ಅನಾನುಕೂಲವಾಗಲಿದೆ ಎಂದು ನ್ಯಾಯಾಲಯ ಹೇಳಿದೆ.
ಎನ್‌ಟಿಎ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯವು ಮೇ 5 ರಂದು ನಡೆಸಿದ ನೀಟ್ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಮತ್ತು ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದ್ದು, ಮರು ಪರೀಕ್ಷೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದ್ದವು. ಆದರೆ, ನೀಟ್ ಪರೀಕ್ಷೆ ಮರು ಪರೀಕ್ಷೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಕೇಂದ್ರ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.