ತುಮಕೂರು: ಮಾಜಿ ಸಚಿವರು ನಮ್ಮ ಪಕ್ಷದ ಹಿರಿಯ ನಾಯಕರದ ವಿ. ಸೋಮಣ್ಣ ಅವರಿಗೆ ಪಕ್ಷದ ವರಿಷ್ಠರು ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿ ಅವರು ಸ್ಪರ್ಧಿಸಿದರೆ ಯಾರ ವಿರೋಧ ಇಲ್ಲ ಎಂದು ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಈ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಮಹಿಳೆಯರಿಗೆ ಟಿಕೆಟ್ ಸಿಗುತ್ತೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಬರುವ ದಿನಗಳಲ್ಲಿ ನಿಮ್ಮ ಪ್ರಶ್ನೆಗೆ ಉತ್ತರ ಸಿಗುತ್ತದೆ ಎಂದರು. ಮಾಜಿ ಸಚಿವ ವಿ ಸೋಮಣ್ಣ ತುಮಕೂರಿನಿಂದ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿ ಕೇಂದ್ರದ ವರಿಷ್ಠರು ಒಪ್ಪಿಗೆ ಸೂಚಿಸಿದರೆ ನಮ್ಮದೇನು ಅಭ್ಯಂತರ ಇಲ್ಲ ಎಂದು ಹೇಳಿದರು.
ಸೋಮಣ್ಣ ಎಲ್ಲರಿಗಿಂತ ಹಿರಿಯರಿದ್ದಾರೆ, ಪಕ್ಷ ಒಗ್ಗಟ್ಟಾಗಿ ಎಲ್ಲಾ ತೀರ್ಮಾನ ಮಾಡುತ್ತದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಸೋಮಣ್ಣ ಸ್ಪರ್ಧಿಸುವುದಕ್ಕೆ ಯಾರ ವಿರೋಧವೂ ಇಲ್ಲ ಎಂದು ಹೇಳಿದರು. ರಾಜ್ಯದ 28 ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧೆ ಮಾಡಬೇಕೆಂಬ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.