Sunday, April 20, 2025
Google search engine

Homeರಾಜ್ಯಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆಯನ್ನು ತೆರವುಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯವಾಗಿ ನಿಂದಿಸಿದ್ದಲ್ಲದೇ ಬೆದರಿಕೆ ಹಾಕಿರುವ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಸರ್ವೇ ನಂಬ್ರ 309ರಲ್ಲಿ ಲೋಲಾಕ್ಷ ಗೌಡ ಎಂಬುವವರು ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಣ ಮಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಅಕ್ಟೋಬರ್ 9ರಂದು ಬೆಳಗ್ಗೆ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದೆ. ಈ ವೇಳೆ ಲೋಲಾಕ್ಷ ಗೌಡ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಿಸಲು ಫೌಂಡೇಶನ್ ಹಾಕಿರುವುದು ಕಂಡುಬಂದಿತ್ತು. ಕೂಡಲೇ ನಿವೇಶನವನ್ನು ತೆರವು ಮಾಡುವಂತೆ ಲೋಲಾಕ್ಷ ಗೌಡರಿಗೆ ಸೂಚಿಸಿದ್ದೆವು. ಆದರೆ ಅವರು ತೆರವುಗೊಳಿಸದ ಕಾರಣ ಮನೆ ಫೌಂಡೇಶನನ್ನು ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಮುಖಾಂತರ ತೆರವುಗೊಳಿಸಲು ಮುಂದಾದೆವು. ಆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಅದನ್ನು ತಡೆದರು. ಅಲ್ಲದೇ ಅಧಿಕಾರಿಗಳ ಸಮ್ಮುಖದಲ್ಲಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಪದ ಬಳಸಿ ನಿಂದಿಸಿದ್ದಲ್ಲದೆ, ನಿವೇಶನವನ್ನು ತೆರವುಗೊಳಿಸಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು. ಹೀಗಾಗಿ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular