ಬೆಂಗಳೂರು : ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲೇ ಆಲಿಸಿ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ‘ಜನಸ್ಪಂದನ’ ಕಾರ್ಯಕ್ರಮಗಳನ್ನು ನಿಯಮಿತವಾಗಿ ಆಯೋಜಿಸುವುದನ್ನು ಕಡ್ಡಾಯಗೊಳಿಸಿ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ.
ಜೂನ್ 13ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಭೆಯಲ್ಲಿ ನೀಡಿದ ಸೂಚನೆಯಂತೆ ಈ ಆದೇಶ ಜಾರಿಯಾಗಿದ್ದು, ಹೊಸ ಮಾರ್ಗಸೂಚಿಯಂತೆ, ಪ್ರತಿ ವಾರ ಜಿಲ್ಲಾಧಿಕಾರಿಗಳು ಜಿಲ್ಲೆಯ ಒಂದೊಂದು ಹೋಬಳಿಗೆ ಖುದ್ದಾಗಿ ಭೇಟಿ ನೀಡಿ ಜನಸ್ಪಂದನ ಕಾರ್ಯಕ್ರಮ ನಡೆಸಬೇಕು. ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಪ್ರಮುಖ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಇದೇ ಮಾದರಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸರ್ಕಾರ ಸೂಚಿಸಿದೆ.
ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಡ್ಡಾಯವಾಗಿ ಭಾಗವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಸಾಧ್ಯವಾದಷ್ಟು ಬೇಗ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಲಾಗಿದೆ.
ಕಾರ್ಯಕ್ರಮದ ದಿನಾಂಕ ಮತ್ತು ಸ್ಥಳವನ್ನು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಜಿಲ್ಲಾಧಿಕಾರಿಗಳು ನಿಗದಿಪಡಿಸಬೇಕು. ಸಂಬಂಧಿತ ಕ್ಷೇತ್ರದ ಶಾಸಕರಿಗೂ ಮುಂಚಿತವಾಗಿ ಮಾಹಿತಿ ನೀಡುವುದರ ಜೊತೆಗೆ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡುವಂತೆ ಸೂಚಿಸಲಾಗಿದೆ.
ಜನಸ್ಪಂದನದಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳು ಮತ್ತು ಅಹವಾಲುಗಳನ್ನು ಅದೇ ದಿನ ಕಡ್ಡಾಯವಾಗಿ IPRGS (Integrated Public Grievance Redressal System) ಪೋರ್ಟಲ್ಗೆ ಅಪ್ಲೋಡ್ ಮಾಡಬೇಕು. ಇದರಿಂದ ಸಾರ್ವಜನಿಕರು ತಮ್ಮ ಅರ್ಜಿಗಳ ವಿಲೇವಾರಿ ಪ್ರಗತಿಯನ್ನು ಆನ್ಲೈನ್ನಲ್ಲಿ ಸುಲಭವಾಗಿ ಪರಿಶೀಲಿಸಬಹುದಾಗಿದೆ.
ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ವಿಶೇಷ ಜವಾಬ್ದಾರಿ ನೀಡಲಾಗಿದೆ. ಅವರು ತಿಂಗಳಿಗೆ ಕನಿಷ್ಠ ಎರಡು ಬಾರಿ ಜಿಲ್ಲೆಗಳಿಗೆ ಭೇಟಿ ನೀಡಿ, ಜನಸ್ಪಂದನ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಿ ಪರಿಶೀಲನೆ ನಡೆಸಬೇಕು ಹಾಗೂ ತಮ್ಮ ಭೇಟಿಯ ವಿವರಗಳನ್ನು DIS ಪೋರ್ಟಲ್ನಲ್ಲಿ ದಾಖಲಿಸಬೇಕು.
ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಿ, ಆಡಳಿತವನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಜಾರಿಗೆ ತಂದಿದೆ.



