ಮಡಿಕೇರಿ: ಸಂವಿಧಾನ ದಿನಾಚರಣೆ ಪ್ರಯುಕ್ತ ಜನವರಿ, ೨೬ ರಿಂದ ೨೨ ದಿನಗಳ ಕಾಲ ಜಿಲ್ಲೆಯ ೧೦೩ ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಶಾಲಾ-ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಕೋರಿದ್ದಾರೆ.
ಸಂವಿಧಾನ ದಿನಾಚರಣೆ ಪ್ರಯುಕ್ತ ಜನವರಿ, ೨೬ ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಸಂವಿಧಾನ ಜಾಗೃತಿ ಜಾಥಗೆ ಚಾಲನೆ ನೀಡಲಿದ್ದಾರೆ. ಬಳಿಕ ಜನವರಿ, ೨೭ ರಿಂದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಅಭಿಯಾನ ನಡೆಯಲಿದ್ದು, ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸವುದು ಸಂವಿಧಾನದ ಅತಿ ಮುಖ್ಯ ಆಶಯವಾಗಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥ ವನ್ನು ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಹೋಬಳಿವಾರು ನೋಡಲ್ ಅಧಿಕಾರಿಗಳು ಹಾಗೂ ಸಹಾಯಕ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾಯ ಗ್ರಾ.ಪಂ.ಗೆ ಬಂದಾಗ ಸ್ಥಳೀಯ ಪ್ರಮುಖರು, ಸಂಘ ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಗತ್ಯ ಸಹಕಾರ ನೀಡುವಂತೆ ಕೋರಿದರು.
ನೋಡಲ್ ಅಧಿಕಾರಿಗಳ ಜೊತೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಜಾಥ ಸಂದರ್ಭದಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಅಗತ್ಯ ಮಾಹಿತಿ ನೀಡುವುದು, ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸುವುದು, ಶಾಲಾ-ಕಾಲೇಜು ಇತರರನ್ನು ಆಹ್ವಾನಿಸುವುದು, ಈ ಬಗ್ಗೆ ಪೂರ್ವಭಾವಿಯಾಗಿ ಸ್ಥಳೀಯರೊಂದಿಗೆ ಚರ್ಚೆ ನಡೆಸುವುದು, ಸಂವಿಧಾನ ಜಾಗೃತಿ ಸಂಬಂಧಿಸಿದಂತೆ ಸ್ಥಳೀಯ ಶಾಲಾ-ಕಾಲೇಜು ಮುಖ್ಯಸ್ಥರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ರಸಪ್ರಶ್ನೆ, ಪ್ರಬಂಧ, ಸಂಗೀತ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.