Friday, April 4, 2025
Google search engine

Homeರಾಜ್ಯರಾಜ್ಯದಲ್ಲಿ ಭ್ರೂಣ ಹತ್ಯೆ ವಿರುದ್ಧ ಕಾರ್ಯಾಚರಣೆ: ಡಿಕಾಯ್ ಅಪರೇಷನ್ ಮೂಲಕ 46 ಮಂದಿ ಬಂಧನ:...

ರಾಜ್ಯದಲ್ಲಿ ಭ್ರೂಣ ಹತ್ಯೆ ವಿರುದ್ಧ ಕಾರ್ಯಾಚರಣೆ: ಡಿಕಾಯ್ ಅಪರೇಷನ್ ಮೂಲಕ 46 ಮಂದಿ ಬಂಧನ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಸದನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ. ಅಲ್ಲದೇ ಡಿಕಾಯ್‌ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.‌

ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಸರ್ಕಾರವು ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ. 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಪ್ಟ್ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಶೇ.100 ರಷ್ಟು ಗರ್ಭಿಣಿಯರ ನೊಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡಲು ಕಲ್ಪಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಇದುವರೆಗೂ ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್ / ಮಾಲೀಕರು/ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ ಎಂದು ತಿಳಿಸಿದರು.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್ / ಆಸ್ಪತ್ರೆ/ ವೈದ್ಯರು / ದಲ್ಲಾಳಿಗಳು / ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು ರೂ.50 ಸಾವಿರದಿಂದ ರೂ.1ಲಕ್ಷದವರೆಗೆ ಹೆಚ್ಚಿಸಲಾಗಿದೆ ಎಂದರು.

ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಚರಣೆ ನಡೆಸಲಾಗಿದೆ ಎಂದರು.

ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯದಂತ ಜನ ಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ವಿವರಿಸಿದರು.

RELATED ARTICLES
- Advertisment -
Google search engine

Most Popular