ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ಬುಧವಾರ ಮುಂಜಾನೆ ನವದೆಹಲಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ, ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ಮೋದಿ ಅವರು ದಿನದ ಮೊದಲಾರ್ಧದಲ್ಲಿ ಭದ್ರತಾ ಸಂಪುಟ ಸಮಿತಿಯ ಸಭೆ ನಡೆಸುವ ಸಾಧ್ಯತೆಯಿದೆ , ಇದರಲ್ಲಿ ಭಾರತವು ಮುಂದಿನ ದಿನಗಳಲ್ಲಿ ತನ್ನ ಪ್ರತಿಕ್ರಿಯೆ ಮತ್ತು ರಕ್ಷಣಾ ಕಾರ್ಯತಂತ್ರವನ್ನು ರೂಪಿಸಲಿದೆ ಎಂದು ಹೇಳಲಾಗಿದೆ. ಮಂಗಳವಾರ, ಪ್ರಧಾನಿ ಮೋದಿ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು “ಬಲವಾಗಿ” ಖಂಡಿಸಿದರು ಮತ್ತು ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದರು.
“ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡಲಾಗುವುದಿಲ್ಲ, ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ” ಎಂದು ಪ್ರಧಾನಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಜೊತೆಗೆ, ಸಿಸಿಎಸ್‌ನ ಭಾಗವಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಕೂಡ ತಮ್ಮ ಅಮೆರಿಕ ಮತ್ತು ಪೆರುವಿನ ಅಧಿಕೃತ ಭೇಟಿಯನ್ನು ಮೊಟಕುಗೊಳಿಸಿದ್ದಾರೆ. ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸೇರಿದಂತೆ ವಿಶ್ವದಾದ್ಯಂತದ ನಾಯಕರಿಂದ ಭಾರತಕ್ಕೆ ಬೆಂಬಲ ಮತ್ತು ದಾಳಿಗೆ ಖಂಡನೆಯ ಸಂದೇಶಗಳು ರವಾನೆಯಾಗಿವೆ.