Monday, April 21, 2025
Google search engine

Homeರಾಜ್ಯಮಧುಗಿರಿಯಲ್ಲೂ ಪಾವಗಡ ಮಾದರಿ ಸೋಲಾರ್ ಪಾರ್ಕ್: ಇಂಧನ ಸಚಿವ ಕೆ.ಜೆ.ಜಾರ್ಜ್

ಮಧುಗಿರಿಯಲ್ಲೂ ಪಾವಗಡ ಮಾದರಿ ಸೋಲಾರ್ ಪಾರ್ಕ್: ಇಂಧನ ಸಚಿವ ಕೆ.ಜೆ.ಜಾರ್ಜ್

ತುಮಕೂರು : ಪಾವಗಡ ಮಾದರಿಯಲ್ಲಿ ಮಧುಗಿರಿ ತಾಲೂಕಿನಲ್ಲೂ ಸೋಲಾರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಸೋಮವಾರ ಕುಸುಮ್ ಸಿ ಯೋಜನೆಯ ಅನುಷ್ಠಾನ ಕುರಿತಂತೆ ತಮ್ಮ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧುಗಿರಿ ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಅಗತ್ಯ ಭೂಮಿ ಒದಗಿಸಿಕೊಡುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಕೆ.ಎನ್.ರಾಜಣ್ಣ ಅವರು ಭರವಸೆ ನೀಡಿದ್ದಾರೆ. ಅದರಂತೆ ಸೋಲಾರ್ ಪಾರ್ಕ್ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರಿ ಸ್ವಾಮ್ಯದ ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ಜತೆ ಜಂಟಿ ಸಹಭಾಗಿತ್ವದಲ್ಲಿ ಪಾವಗಡ ಸೋಲಾರ್ ಪಾರ್ಕ್ ನಿರ್ಮಿಸಲಾಗುವುದು. ಒಂದು ಮೆ.ವ್ಯಾ ಸೌರ ವಿದ್ಯುತ್ ಉತ್ಪಾದನೆಗೆ ೪-೫ ಎಕರೆ ಜಮೀನು ಬೇಕಾಗುತ್ತದೆ. ಅದೇ ರೀತಿ ೫೦೦ ಮೆ.ವ್ಯಾ ಉತ್ಪದಾನೆಗೆ ೨ ರಿಂದ ೨.೫ ಸಾವಿರ ಎಕರೆ ಜಾಗದ ಅವಶ್ಯಕತೆ ಇದೆ. ಭೂಮಿಯ ಲಭ್ಯತೆ ಆಧರಿಸಿ ಈ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದರು.

ಪಾವಗಡದಲ್ಲಿ ನಿರ್ಮಿಸಿರುವ ಸೋಲಾರ್ ಪಾರ್ಕ್ ೨,೦೫೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದ್ದು, ಇದರ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಗುತ್ತಿಗೆಯನ್ನೂ ನೀಡಲಾಗಿದೆ ಎಂದು ಸಚಿವರು ಹೇಳಿದರು.

ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಗೆ ನೀಡುವ ಸಬ್ಸಿಡಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ರೈತರ ಪಂಪ್ ಸೆಟ್ ಗಳ ಅಕ್ರಮ-ಸಕ್ರಮಕ್ಕೂ ಒತ್ತು ನೀಡುತ್ತಿದ್ದೇವೆ. ಆದರೂ ವಿದ್ಯುತ್ ಸಮಸ್ಯೆ ಬಗೆಹರಿಯುತ್ತಿಲ್ಲ. ಅಕ್ರಮ ಪಂಪ್ ಸೆಟ್ ಗಳಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟುಹೋಗಿ ವಿದ್ಯುತ್ ಪೂರೈಕೆ ವ್ಯತ್ಯಯವಾಗುವುದರ ಜತೆಗೆ ಇಲಾಖೆಗೂ ನಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಲಾರ್ ಪಂಪ್ ಸೆಟ್ ಮತ್ತು ಜನರೇ ಸೋಲಾರ್ ವಿದ್ಯುತ್ ಉತ್ಪಾದಿಸುವ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಶಾಸಕರೂ ಆಗಿರುವ ದೆಹಲಿಯಲ್ಲಿನ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕ ಕೆ.ಷಡಕ್ಷರಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular