ಮಂಗಳೂರು: ಕರಾವಳಿಯಲ್ಲಿ ಕಳೆದ ೩೦ ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ಮಂಗಳೂರಿನಲ್ಲಿ ಇಂದು ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ಪ್ರದರ್ಶಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈ ಬಾರಿ ಕೈ ಕಾರ್ಯಕರ್ತರು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪಣ ತೊಟ್ಟಿದ್ದಾರೆ. ಕರಾವಳಿಯ ಜನರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ೩೦ ವರ್ಷಗಳಿಂದ ಜನರು ಬಿಜೆಪಿಯನ್ನು ನೋಡಿ ಆಗಿದೆ. ಈ ಬಾರಿ ಕರಾವಳಿ ಭಾಗದ ಜನರು ಬದಲಾವಣೆ ಬಯಸಿದ್ದಾರೆ. ಚುನಾವಣೆ ಸಂದರ್ಭಗಳಲ್ಲಿ ಬಿಜೆಪಿ ಯಾವ ರೀತಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದನ್ನು ಜನರು ನೋಡುತ್ತಿದ್ದಾರೆ ಎಂದು ಹೇಳಿದರು.