ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 2ಕ್ಕೆ ಮುಂದೂಡಿದೆ.
ಪ್ರಕರಣವನ್ನು ರದ್ದುಪಡಿಸಬೇಕು ಹಾಗೂ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗಳು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿದ್ದವು. ವಿಶೇಷ ಸರಕಾರಿ ಅಭಿಯೋಜಕ ರವಿವರ್ಮ ಕುಮಾರ್ ವಾದ ಮಂಡಿಸಿದರು.
ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿ, ಶುಕ್ರವಾರ ಅಥವಾ ಸೋಮವಾರ ಒಂದೇ ಬಾರಿಗೆ ವಿಚಾರಣೆ ಪೂರ್ಣಗೊಳಿಸಬಹುದು ಎಂದರು. ಅದಕ್ಕೆ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು. ಅಲ್ಲದೆ ಅಲ್ಲಿಯವರೆಗೆ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ್ದ ಮಧ್ಯಾಂತರ ಆದೇಶವನ್ನೂ ವಿಸ್ತರಿಸಿತು.