ಚಿತ್ರದುರ್ಗ: ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬಿಡುಗಡೆಗೆ ಆದೇಶ ಮಾಡಿತ್ತು.
ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಕಳೆದ ೧೪ ತಿಂಗಳಿಂದ ಕಾರಾಗೃಹದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಯಾದರು. ಜೈಲಿನಿಂದ ಹೊರಗೆ ಬಂದ ಮುರುಘಾ ಶರಣರನ್ನು ಭಕ್ತರು, ವಕೀಲರು ಸ್ವಾಗತಿಸಿದರು. ಇಲ್ಲಿಂದ ಶರಣರು ದಾವಣಗೆರೆ ವಿರಕ್ತಮಠದ ಕಡೆಗೆ ಪ್ರಯಾಣ ಬೆಳೆಸಿದರು.
ಪ್ರೌಢಶಾಲೆಯ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಹೈಕೋರ್ಟ್ ನ.೮ರಂದು ಷರತ್ತುಬದ್ಧ ಜಾಮೀನು ನೀಡಿತ್ತು. ಶರಣರ ಪರ ವಕೀಲರು ಬಿಡುಗಡೆ ಆದೇಶ ಕೋರಿ ನ.೧೦ರಂದು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.