ಕೋಲಾರ: ದಲಿತ ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಆನಂದ ಅವರು ಮೇ ೨೦ರಂದು ನಿಧನ ಹೊಂದಿದ್ದಾರೆ.
೪೪ ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರು. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಪ್ರಸ್ತುತ ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ. ಇತ್ತೀಚೆಗೆ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದವಾದ ರಾಣಿ ಶಿವ ಶಂಕರ ಶರ್ಮರ ಕೊನೆಯ ಬ್ರಾಹ್ಮಣ ಕೃತಿ ಇದೀಗ ಅಭಿನವ ಪ್ರಕಾಶನದಿಂದ ಕನ್ನಡದಲ್ಲಿ ಪ್ರಕಟವಾಗಿದೆ. ಲಕ್ಕೂರು ಆನಂದ ಅವರೇ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಆನಂದರಿಗೆ ಸಂದಿದೆ. ತಮಗೆ ಬಂದ ಪ್ರಶಸ್ತಿಗಳನ್ನು ಅವರು, ರಾಜ್ಯದ ಎಲ್ಲಾ ದಮನಿತ ಸಮುದಾಯಗಳಿಗೆ ಅರ್ಪಿಸಿದ್ದಾರೆ.