ಬೆಂಗಳೂರು : ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಗೆಲುವು ಸಾಧಿಸಿದಂತೆ, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಇದೇ ರೀತಿಯ ಪ್ರಯತ್ನಗಳನ್ನು ಬಿಜೆಪಿ ನಡೆಸಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಚುನಾವಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಂಡಿದ್ದು, ಆಯೋಗವನ್ನು ತನ್ನ ನಿಯಂತ್ರಣದಲ್ಲಿ ಇಟ್ಟುಕೊಂಡಿದೆ ಎಂದು ಆರೋಪಿಸಿದರಲ್ಲದೆ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಅಲ್ಲ, ಅದು ಚುನಾವಣಾ ಆಯೋಗದ ಗೆಲುವು ಎಂದು ಟೀಕಿಸಿದರು.
ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಹರಿಯಾಣದಂತೆ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂದಲ್ಲೂ ವ್ಯವಸ್ಥೆಯನ್ನು ದುರುಪಯೋಗ ಮಾಡಲಾಗಿದೆ ಎಂದರು. ಅಸ್ಸಾಂನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮೂಲಕ ಗೊಂದಲ ಸೃಷ್ಟಿಸಲಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಹೆಸರಿನಲ್ಲಿ ಲಕ್ಷಾಂತರ ಜನರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ದೂರಿದರು.
ಸುಮಾರು 91 ಲಕ್ಷ ಮತದಾರರು ಮತದಾನದಿಂದ ವಂಚಿತರಾಗಿದ್ದಾರೆ. ಅವರ ಅಹವಾಲುಗಳನ್ನು ಕೇಳದೆ ಇರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧ ಎಂದು ಪ್ರಶ್ನಿಸಿದರು. ಹಾಗೂ ಸ್ವಲ್ಪ ಮತಗಳ ವ್ಯತ್ಯಾಸವೇ ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿದೆ ಎಂದು ಹೇಳಿದರು. ಈ ವಿಷಯವನ್ನು ಕಾನೂನು ಹೋರಾಟದ ಮೂಲಕ ಪ್ರಶ್ನಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಇದೇ ಮಾದರಿ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ನಡೆಯಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಇದೇ ವೇಳೆ ತಮಿಳುನಾಡು ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳನ್ನು ಪಡೆದಿದ್ದರೂ, ಜನರ ತೀರ್ಪನ್ನು ಗೌರವಿಸಬೇಕಾಗಿದೆ ಎಂದು ಹೇಳಿದರು. ಮುಂದಿನ ರಾಜಕೀಯ ತೀರ್ಮಾನಗಳನ್ನು ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದರು. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೂ ಮತಾಂತರ ಕಡಿಮೆ ಆಗಿರುವುದನ್ನು ಪಕ್ಷದ ಒಳಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಶೃಂಗೇರಿ ಕ್ಷೇತ್ರದಲ್ಲಿ ಅಂಚೆ ಮತಪತ್ರಗಳ ತಿರುಚಾಟದ ಆರೋಪಗಳಿದ್ದರೂ ತನಿಖೆ ಮುಗಿಯುವ ಮೊದಲು ಫಲಿತಾಂಶ ಘೋಷಿಸಿರುವುದನ್ನು ಪ್ರಶ್ನಿಸಿದರು.
ಸಂಪುಟ ಪುನರ್‌ರಚನೆ ಕುರಿತು ಮಾತನಾಡಿದ ಅವರು, ಇದುವರೆಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ತಿಳಿಸಿದ್ದಾರೆ ಎಂದು ಹೇಳಿದರು.
ಇದಲ್ಲದೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕಲ್ಬುರ್ಗಿ ಸೇರಿದಂತೆ ಹಲವು ಭಾಗಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.



