ಗುಡ್ಡಕುಸಿತ ಹಾಗೂ ಪ್ರವಾಹ ಸ್ಥಿತಿಯಿಂದ ತತ್ತರಿಸಿರುವ ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ(ಆಗಸ್ಟ್ 10) ಭೇಟಿ ನೀಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಧಾನಿಯವರು ವೈಮಾನಿಕ ಸಮೀಕ್ಷೆ ನಡೆಸಿ ಕೆಲವು ಜನರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಜುಲೈ 30 ರಂದು ಸಂಭವಿಸಿದ ಭೂಕುಸಿತದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ವಿಭಾಗಗಳು ತಮ್ಮ ಬೃಹತ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ, ಇದೀಗ ತಂಡಗಳು ಅರಣ್ಯ ಪ್ರದೇಶಗಳ ಮೇಲೆ ಕೇಂದ್ರೀಕರಿಸಿವೆ.
ಕೇರಳ ಸರ್ಕಾರವು ನಾಪತ್ತೆಯಾದವರ ಕುಟುಂಬಗಳು ಮತ್ತು ಸ್ಥಳೀಯ ನಿವಾಸಿಗಳ ಸಹಾಯವನ್ನು ಶೋಧ ಕಾರ್ಯಗಳಲ್ಲಿ ಪಡೆದುಕೊಂಡಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಸಂಸತ್ತಿನಲ್ಲಿ ಮಾತನಾಡುತ್ತಾ ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಹೆಚ್ಚಿನ ಪರಿಹಾರ ಮತ್ತು ಸಮಗ್ರ ಪುನರ್ವಸತಿ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು.
ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ರಾಹುಲ್ ಗಾಂಧಿ ಸರ್ಕಾರಕ್ಕೆ ಕರೆ ನೀಡಿದರು. ಒಂದು ವಾರದ ಹಿಂದೆ ಸಂಭವಿಸಿದ ಭಾರೀ ಭೂಕುಸಿತದಿಂದ ಹಾನಿಗೊಳಗಾದ ಎಲ್ಲಾ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇರಳ ಸರ್ಕಾರ ಬುಧವಾರ ಹೇಳಿದೆ.