ನವದೆಹಲಿ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕಾಳಗ ನಡೆಯುತ್ತಿರುವ ಸಮಯದಲ್ಲೇ ಬಿಜೆಪಿಯಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಕೂಡ ಜೋರಾಗಿದ್ದು, ಈ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ಸಂಸದರ ಜೊತೆ ಸಭೆ ನಡೆಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಭಾಗಿಯಾಗಿದ್ದಾರೆ.
ಈ ವೇಳೆ ರಾಜ್ಯ ಬಿಜೆಪಿ ನಾಯಕರ ಜೊತೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಚರ್ಚೆ ನಡೆಸಿದ್ದು, ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ವರದಿ ಪಡೆದಿದ್ದಾರೆ ಎನ್ನಲಾಗಿದ್ದು, ಜೊತೆಗೆ ರಾಜ್ಯದಲ್ಲಿ ಬಿಜೆಪಿಯನ್ನ ಬಲಿಷ್ಠಗೊಳಿಸುವ ಕಾರ್ಯತಂತ್ರಗಳ ಬಗ್ಗೆ ಕೂಡ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಳಾಗುತ್ತಿದೆ.
ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸಂಸದರ ಜೊತೆ ನಡೆಸಿದ ಸಭೆಯಲ್ಲಿ ತಾನು ಭಾಗಿಯಾಗಿದ್ದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ನವದೆಹಲಿಯಲ್ಲಿ ದೇಶದ ಹಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕರ್ನಾಟಕದ ಸಂಸದರ ಸಭೆಯಲ್ಲಿ ಭಾಗವಹಿಸಿದೆನು.
ಕೇಂದ್ರ ಸರ್ಕಾರದ ಜನಪರ ಯೋಜನೆಗಳು ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ಬರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಮಾರ್ಗದರ್ಶನ ನೀಡಿದ್ದರು ಎಂದು ಬೊಮ್ಮಾಯಿ ಬರೆದುಕೊಂಡಿದ್ದಾರೆ.
ಇದೇ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಜೋರಾಗಿದ್ದು, ಇತ್ತೀಚಿಗೆ ಬಿಜೆಪಿ ರೆಬೆಲ್ ನಾಯಕರು ಕೂಡ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.



