ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಇಂದು ರಾತ್ರಿ ೧೨ ಗಂಟೆಯಿಂದ ನಾಳೆ ರಾತ್ರಿ ೧೨ ಗಂಟೆವರೆಗೂ ನಗರದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಇದರಂತೆ ಒಂದು ಕಡೆ ಐದು ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ಧರಣಿ ಹಾಗೂ ಸತ್ಯಾಗ್ರಹ ಮಾಡುವಂತಿಲ್ಲ. ನಿಯಮ ಉಲ್ಲಂಘನೆ ಕಂಡು ಬಂದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದ ಆಯಕಟ್ಟಿನ ಜಾಗಗಳಲ್ಲಿ ಅಗತ್ಯನುಗುಣವಾಗಿ ಪೊಲೀಸರನ್ನ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ೬೦ ಕೆಎಸ್ ಆರ್ ಪಿ, ೪೦ ಸಿಎಆರ್ ಪಡೆ ಹಾಗೂ ೨ ಆರ್ ಎಎಫ್ ಪಡೆಗಳನ್ನ ಬಂದೋಬಸ್ತ್ ಮಾಡಲಿವೆ. ಸೆ.೨೯ರಂದು ಕರ್ನಾಟಕ ಬಂದ್ ಕರೆ ನೀಡಿರುವ ಸಂಘಟನಕಾರರು ಅಂದು ಬೆಳಗ್ಗೆ ಟೌನ್ ಹಾಲ್ ನಿಂದ ಫ್ರೀಡಂಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸ್ ಅನುಮತಿ ಕೋರಿ ಮನವಿ ಪತ್ರ ಸಲ್ಲಿಸಿದ್ದಾರೆ. ಕೋರ್ಟ್ ಆದೇಶ ಪ್ರಕಾರ ಬಂದ್ ಮಾಡುವುದು ಕಾನೂನುಬಾಹಿರ.
ಬಂದ್ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಹೀಗಾಗಿ ನ್ಯಾಯಾಲಯ ಆದೇಶವನ್ನು ಯಥಾವತ್ತಾಗಿ ಪಾಲಿಸಲಾಗುವುದು. ಹೀಗಾಗಿ ಮೆರವಣಿಗೆ ನಡೆಸಲು ಅನುಮತಿ ನೀಡಿಲ್ಲ. ಅಲ್ಲದೆ ನಾಳೆ ಬೆಂಗಳೂರು ಬಂದ್ ವಿಚಾರವಾಗಿಯೂ ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಿಲ್ಲ. ಆದರೆ ಪ್ರತಿಭಟನೆ ನಡೆಸಲು ಮಾತ್ರ ಅವಕಾಶವಿದೆ ಎಂದು ಆಯುಕ್ತರು ಸ್ಪಷ್ಟಪಡಿಸಿದರು. ನಾಳೆ ಬೆಂಗಳೂರು ಬಂದ್ ಹಿನ್ನೆಲೆ ಸಾರ್ವಜನಿಕ ಸಾರಿಗೆಗಳು ಕಾರ್ಯನಿರ್ವಹಿಸಲಿದೆ. ಬಂದ್ ನೆಪದಲ್ಲಿ ಬಲವಂತವಾಗಿ ವಾಹನಗಳನ್ನ ತಡೆಯುವುದು, ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.