ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಐಷಾರಾಮಿ ಹೋಟೆಲ್‌ಗಳ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ದಾಳಿ ನಡೆಸಿ ವಿದೇಶಿ ಹಾಗೂ ಹೊರ ರಾಜ್ಯದ ಮಹಿಳೆಯರನ್ನು ರಕ್ಷಿಸಿದ್ದಾರೆ. ಇದೇ ವೇಳೆ ವಿದೇಶಿ ಪ್ರಜೆಗಳು ಸೇರಿ 9 ಮಂದಿಯನ್ನು ಬಂಧಿಸಿದ್ದಾರೆ.
ವಿದೇಶ ಹಾಗೂ ಹೊರ ರಾಜ್ಯಗಳಿಂದ ಮಾನವ ಕಳ್ಳ ಸಾಗಣೆ ಮೂಲಕ ಯುವತಿಯರನ್ನು ಕರೆತಂದು ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ವಿದೇಶ ಹಾಗೂ ಹೊರ ರಾಜ್ಯದ ಹುಡುಗಿಯರನ್ನು ಕರೆಸಿಕೊಂಡು ಸಂಪಿಗೆಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇರೆಗೆ ಸಂಪಿಗೆಹಳ್ಳಿ ಮತ್ತು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಡಿಕೇರಿ ಮೂಲದ ಸುಬ್ರಹ್ಮಣ್ಯ ಮತ್ತು ಮಣಿ ಎಂಬುವರನ್ನು ಬಂಧಿಸಲಾಗಿದೆ.
ಇಬ್ಬರು ಮಹಿಳೆಯನ್ನು ರಕ್ಷಿಸಿದ್ದಾರೆ. ಉದ್ಯೋಗ ಕೊಡಿಸುವ ನೆಪದಲ್ಲಿ ವಿದೇಶದ ಇಬ್ಬರು ಮಹಿಳೆಯರನ್ನು ಮಾನವ ಕಳ್ಳ ಸಾಗಣೆ ಮೂಲಕ ಕರೆತಂದು ರಾಮಮೂರ್ತಿನಗರ ಹಾಗೂ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಕೂಡಿಹಾಕಿ ವೇಶ್ಯಾವಾಟಿಕೆ ದಂಧೆಗೆ ದೂಡಲಾಗಿತ್ತು. ಇಬ್ಬರು ಮಹಿಳೆಯರು ಹಾಗೂ ಮಗುವನ್ನು ರಕ್ಷಣೆ ಮಾಡಲಾಗಿದೆ. ರಕ್ಷಿಸಿದ ಮಹಿಳೆಯರನ್ನು ತುಮಕೂರಿನಲ್ಲಿರುವ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಶ್ರೀನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಸಿಕ್ಕಿತ್ತು. ಮನೆಯ ಮೇಲೆ ದಾಳಿ ನಡೆಸಿ, ವಿದೇಶಿ ಮಹಿಳೆಯನ್ನು ರಕ್ಷಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ವಲಸಿಗರ ಸೆರೆ: ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಐಡಿಐ ಲೇಔಟ್‌ನಲ್ಲಿ ನೆಲಸಿದ್ದ ಮಹಿಳೆ ಸೇರಿ ನಾಲ್ವರು ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯವರ್ತಿಗಳ ಮೂಲಕ ಇವರು ಪಾನ್‌ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಮಾಡಿಕೊಂಡಿದ್ದರು. ಆರೋಪಿಗಳ ವಿರುದ್ಧ ಸರ್ಜಾಪುರ ಮತ್ತು ಬಂಡೇ ಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.