Sunday, April 20, 2025
Google search engine

Homeರಾಜ್ಯಸುದ್ದಿಜಾಲಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ : ನ್ಯಾಯಾಧೀಶ ಈಶ್ವರ್

ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ : ನ್ಯಾಯಾಧೀಶ ಈಶ್ವರ್

ಚಾಮರಾಜನಗರ: ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ತಿಳಿಸಿದರು.

ನಗರದ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ನಗರ ಸಭೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಗಿಡ ನೆಡುವ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಪರಿಸರವನ್ನು ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ. ಪರಿಸರದ ಸೌಂದರ್ಯವೂ ಹೆಚ್ಚಾಗಲಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪ್ರತಿ ತಾಲೂಕಿನಲ್ಲೂ 10 ಸಾವಿರ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಮನೆಯ ಸುತ್ತಲೂ ಗಿಡಗಳನ್ನು ಬೆಳೆಸುವುದಲ್ಲದೇ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಇತರರಿಗೂ ಗಿಡ ನೆಡುವಂತೆ ಪ್ರೋತ್ಸಾಹಿಸಬೇಕು. ಇದು ಪರಿಸರವನ್ನು ಉಳಿಸುವ ಮಾರ್ಗವಾಗಿದೆ. ಪ್ರತಿಯೊಬ್ಬರು ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಬ್ಯಾಗ್‍ಗಳನ್ನು ಬಳಸಬೇಕು. ಮರುಬಳಕೆ ವಸ್ತುಗಳನ್ನು ಉಪಯೋಗಿಸುವುದರೊಂದಿಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪರಿಸರ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಅವರು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಪ್ರಸ್ತುತ ದಿನಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಗಿಡ-ಮರಗಳ ಮಾರಣಹೋಮ ನಡೆಯುತ್ತಿದೆ. ಪ್ರತಿಯೊಬ್ಬರೂ ಹುಟ್ಟಿದ ದಿನದಂದು ಗಿಡ ನೆಟ್ಟು ಪ್ರೋಸಬೇಕು. ಸಮಾರಂಭಗಳಲ್ಲಿ ಉಡುಗೊರೆಗಳ ಬದಲಾಗಿ ಗಿಡಗಳನ್ನು ನೀಡುವುದರಿಂದ ಪರಿಸರವನ್ನು ಉಳಿಸಬಹುದು. ಸುತ್ತಮುತ್ತಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಬ್ದಾರಿ. ವೃಕ್ಷೋ ರಕ್ಷತಿ ರಕ್ಷಿತಃ ನಾಣ್ನುಡಿಯಂತೆ ಮರ-ಗಿಡಗಳನ್ನು ಸಂರಕ್ಷಣೆ ಮಾಡಿದರೆ ನಮ್ಮ ವೈಯಕ್ತಿಕ ಆರೋಗ್ಯದ ಜೊತೆಗೆ ಪರಿಸರವೂ ಕೂಡ ಸಂರಕ್ಷಣೆ ಆಗುತ್ತದೆ ಎಂದರು.

ಇಸ್ರೋ ನಿವೃತ್ತ ಪರಿಸರ ವಿಜ್ಞಾನಿ ಜಗನಾಥ್ ವೆಂಕಟರಾಮಯ್ಯ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ ಪರಿಸರದ ಬಗ್ಗೆ ಅರಿವಿದ್ದರೆ ಸಾಲದು ಪ್ರಜ್ಞೆಯೂ ಬೇಕು, ಪ್ಲಾಸ್ಟಿಕ್ ಬಳಕೆ ಬೇಕು ಆದರೆ ದುರ್ಬಳಕೆ ಬೇಡ. ನಾವು ಬದುಕುವ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಇದೇ ವೇಳೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮಕ್ಕೂ ಮೊದಲು ಡಾ. ಬಿ. ಆರ್ ಅಂಬೇಡ್ಕರ್ ಭವನದ ಆವರಣದಲ್ಲಿ ಗಣ್ಯರು ಗಿಡ ನೆಟ್ಟು ನೀರೆರೆದರು. ಪರಿಸರ ಅಧಿಕಾರಿ ಪಿ.ಕೆ ಉಮಾಶಂಕರ್, ನಗರಸಭೆ ಆಯುಕ್ತರಾದ ಎಸ್.ವಿ. ರಾಮ್ ದಾಸ್, ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಸಭ್ಯಶ್ರೀ, ನಗರದ ಪರಿಸರ ಪ್ರೇಮಿ ಹಾಗೂ ಈಶ್ವರಿ ಸೋಶಿಯಲ್ ಟ್ರಸ್ಟ್‍ನ ಅಧ್ಯಕ್ಷರಾದ ಸಿ.ಎನ್. ವೆಂಕಟೇಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular