Saturday, April 19, 2025
Google search engine

HomeUncategorizedವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ


ಮೈಸೂರು: ಪದವಿ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಡಿಎಸ್‌ಓ ಸಂಘಟನೆ ವತಿಯಿಂದ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಎಐಡಿಎಸ್‌ಓ ಜಿಲ್ಲಾಧ್ಯಕ್ಷ ಸುಭಾಷ್ ಮಾತನಾಡಿ, ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜುಗಳಲ್ಲಿ ಈ ವರ್ಷದ ಪ್ರವೇಶಾತಿ ಸಂಖ್ಯೆ ಕುಸಿದಿದೆ. ಈ ಪರಿಸ್ಥಿತಿಗೆ ೨೦೨೦ರಲ್ಲಿ ಸರ್ಕಾರ ಜಾರಿಗೆ ತಂದ ಹೊಸ ಶಿಕ್ಷಣ ನೀತಿ ಹೇರಿಕೆಯೇ ಪ್ರಮುಖ ಕಾರಣ. ಶೈಕ್ಷಣಿಕ ಕೇಂದ್ರ ಎಂದು ಪ್ರಸಿದ್ಧಿ ಪಡೆದಿರುವ ಮೈಸೂರು ಸಹ ಸಮಸ್ಯೆಗಳಿಂದ ಹೊರತಾಗಿಲ್ಲ. ಸರ್ಕಾರಿ ಕಾಲೇಜುಗಳಲ್ಲಿನ ಶುಲ್ಕ ಏರಿಕೆ, ಸರ್ಕಾರಿ ಸಂಸ್ಥೆಗಳನ್ನು ಸ್ವಾಯತ್ತ ಸಂಸ್ಥೆಗಳನ್ನಾಗಿ ಮಾಡುತ್ತಿರುವುದು ಎನ್‌ಇಪಿಯ ಒಂದು ಭಾಗವಾಗಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದಿಂದಲೇ ದೂರ ಉಳಿಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಿಡಿ ಕಾರಿದರು.
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ವಿದ್ಯಾರ್ಥಿ ವೇತನ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೂಕ್ತ ಬಸ್ ಹಾಗೂ ಹಾಸ್ಟೆಲ್ ಸೌಲಭ್ಯವಿಲ್ಲದಿರುವುದು, ಸಮರ್ಪಕವಾಗಿ ತರಗತಿಗಳನ್ನು ನಡೆಸಲು ಶಿಕ್ಷಕರ ಕೊರತೆ ಇವೆಲ್ಲವೂ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ತಿಲಾಂಜಲಿ ಇಡುತ್ತಿವೆ. ಇಂತಹ ಪರಿಸ್ಥಿತಿಯಿಂದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ರಕ್ಷಿಸಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವನ್ನು ಹಸನಾಗಿಸುವ ತುರ್ತು ಅವಶ್ಯಕತೆಯಿದೆ. ಹಾಗಾಗಿ ಸರ್ಕಾರ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಕಾರ್ಯದರ್ಶಿ ಮಂಡಳಿ ಸದಸ್ಯರಾದ, ನಿತಿನ್, ಸ್ವಾತಿ ಚಂದ್ರಿಕಾ, ಚಂದನ, ಹೇಮಾ ಹಾಗೂ ಸಮಿತಿಯ ಸದಸ್ಯರುಗಳಾದ ಧನುಶ್ರಿ, ಅಂಜಲಿ ಶ್ರೇಯಸ್, ಜಟ್ಟಪ್ಪ, ದಿಶಾ ಹಾಗೂ ಮಹಾರಾಜ ಹಾಗೂ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular