ಬೆಟ್ಟದಪುರ: ಕುಡಿಯುವ ನೀರು, ರಸ್ತೆ ಮತ್ತು ಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಶನಿವಾರ ಚಪ್ಪರದಹಳ್ಳಿ ಗ್ರಾಮದ ಡೈರಿ ಬೀದಿಯ ಸೈಟ್ ನಿವಾಸಿಗಳು ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದ್ದ ಪರಿಣಾಮ ಸೋಮವಾರ ಪಿರಿಯಾಪಟ್ಟಣ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಕುಮಾರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಚಪ್ಪರದಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಇಲ್ಲ. ಜಲಜೀವನ್ ಮಿಷನ್ ಕಾಮಗಾರಿ ನಡೆಯುತ್ತಿರುವುದರಿಂದ ಸ್ವಲ್ಪ ಸಣ್ಣ ಪುಟ್ಟ ಸಮಸ್ಯೆಗಳಾಗಿರಬಹುದು. ಇನ್ನು ಮುಂದೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಮತ್ತು ಚರಂಡಿ ಅವ್ಯವಸ್ಥೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಕೂಡಲೇ ತಹಸಿಲ್ದಾರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಚರ್ಚಿಸಿ ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಿ ಡಿ ಓ ಶ್ರೀದೇವಿ, ಕಾರ್ಯದರ್ಶಿ ಕುಮಾರ್, ಗ್ರಾಮ ಪಂಚಾಯತಿ ಸದಸ್ಯ ಸುರೇಶ್ ಸಿ ಪಿ, ಸೇರಿದಂತೆ ಸಿಬ್ಬಂದಿಗಳು ಮತ್ತು ಸ್ಥಳೀಯರು ಹಾಜರಿದ್ದರು.