ಬಾಗಲಕೋಟೆ : ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ತಕ್ಷಣ ನೆರವು ನೀಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬಾದಾಮಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರ ಹೊಲಗಳ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಬರದಿಂದ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ರೈತರ ಸಾಲ ಮನ್ನಾಕ್ಕೆ ಆಗ್ರಹ ಮಾಡಿದ ಅವರು, ರೈತರ ಸಾಲ ಮನ್ನಾ ಮಾಡಬೇಕು. ಸಾಲಗಾರರಿಂದ ರೈತರಿಗೆ ಯಾವುದೇ ರೀತಿಯ ಕಿರುಕುಳ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು. ಹಾಗೂ ನೀರಾವರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದು ಅವರು ಒತ್ತಾಯಿಸಿದರು.
ಭೂಮಿ ಬಳಕೆ ಕುರಿತು ಸರ್ಕಾರದ ವಿರುದ್ಧ ಆರೋಪ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಶೇ.30ರಷ್ಟು ಮಾತ್ರ ಬಳಕೆಯಾಗಿದೆ. ಭೂಮಿ ಮತ್ತು ಉದ್ಯೋಗದ ಕೊರತೆಯಿಂದ ರೈತರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಇದೇ ವೇಳೆ ಬಿಡದಿ ಟೌನ್ಶಿಪ್ ಯೋಜನೆ ಕುರಿತು ಮಾತನಾಡಿದ ಅವರು, ಇದು ರೈತರ ಹಿತಕ್ಕಿಂತ ರಿಯಲ್ ಎಸ್ಟೇಟ್ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು. ರೈತರ ವಿರೋಧದ ನಡುವೆಯೂ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ದೂರಿದರು.
ಬಿಡದಿಯಲ್ಲಿ ದಾಖಲಾದ ಪ್ರಕರಣಗಳ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಹತ್ತು ಮಂದಿಯ ಮೇಲೆ ಪ್ರಕರಣ ದಾಖಲಾಗಿದ್ದು, ಅದರಲ್ಲಿ ಮೂವರು ಗ್ರಾಮದಲ್ಲೇ ಇಲ್ಲದಿದ್ದರೂ ಕೇಸ್ ಹಾಕಲಾಗಿದೆ ಎಂದು ಆರೋಪಿಸಿದರು.



