ಮೈಸೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ನಗರದಲ್ಲಿ ಬುಧವಾರ ಅದ್ಧೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆನ್ ಲೈನ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗೃಹ ಲಕ್ಷ್ಮಿ ಯೋಜನೆಯಡಿ ಮನೆಯ ಮಹಿಳಾ ಮುಖ್ಯಸ್ಥರಿಗೆ ೨ ಸಾವಿರ ರೂ. ಸಹಾಯಧನ ಒದಗಿಸಲಾಗುತ್ತದೆ. ರಾಜ್ಯದಲ್ಲಿ ಈಗಾಗಲೇ ಶೇಕಡಾ ೮೬ರಷ್ಟು ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ೧.೨೮ ಕೋಟಿ ಕುಟುಂಬದ ಯಜಮಾನಿಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಜುಲೈ ೧೯ರಿಂದ ಪ್ರಾರಂಭಗೊಂಡಿದೆ. ಈವರೆಗೆ ೧.೧೧ ಕೋಟಿಗೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಸಿಕೊಡಿದ್ದಾರೆ. ಡಿಬಿಟಿ ಮೂಲಕ ಹಣ ಪಾವತಿ ಮಾಡಲಾಗುತ್ತದೆ.
ಇದೀಗ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ನಾವು ನುಡಿದಂತೆ ನಡೆದಿದ್ದೇವೆ. ಯುವನಿಧಿ ಯೋಜನೆಯನ್ನು ಹೊರತುಪಡಿಸಿ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಕೊಟ್ಟ ಮಾತು ನಡೆಸಿಕೊಟ್ಟಿದ್ದೇವೆ. ಮಹಿಳಾ ಸಬಲೀಕರಣ ಯೋಜನೆ ಜಾರಿ ಮಾಡುವ ಮೂಲಕ ನಾವು ನಮ್ಮ ಭರವಸೆ ಉಳಿಸಿಕೊಂಡಿದ್ದೇವೆ ಎಂದು ಹೇಳಿದರು.
ನಮಗೆ ಕರ್ನಾಟಕ ಶಕ್ತಿ ನೀಡಿದೆ. ಮನೆಯಲ್ಲಿರುವ ಹೆಣ್ಣುಮಕ್ಕಳು ನಮಗೆ ಶಕ್ತಿ ನೀಡಿದ್ದಾರೆ. ರಾಜ್ಯ ವಿವಿಧ ಭಾಗಗಳ ಸಹೋದರ ಸಹೋದರಿಯರು ಕರ್ನಾಟಕದ ಶಕ್ತಿ, ಬುಡ ಆಗಿದ್ದಾರೆ. ಏರುತ್ತಿರುವ ಬೆಲೆಗಳ ಹೊರೆ ಕಡಿಮೆ ಮಾಡಲು ನಾವು ಈ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.
ರಾಜ್ಯಸಭಾ ಸದಸ್ಯ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗೃಹಲಕ್ಷ್ಮಿಯರ ಖಾತೆಗೆ ನೇರ ಹಣ ವರ್ಗಾವಣೆ ಮಾಡಿದರು.
ರಾಜ್ಯಸಭಾ ಸದಸ್ಯರುಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿಪರಮೇಶ್ವರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಚಲುವರಾಯಸ್ವಾಮಿ, ಪಶುಸಂಗೋಪನಾ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಕೆ.ವೆಂಕಟೇಶ್, ಸಣ್ಣ ನೀರಾವರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಕಂದಾಯ ಸಚಿವ ಕೃಷ್ಣ ಭೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸೇರಿದಂತೆ ರಾಜ್ಯ ಸಚಿವ ಸಂಪುಟದ ಸಚಿವರುಗಳು, ನಾಲ್ಕು ಜಿಲ್ಲೆಗಳ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು ಉಪಸ್ಥಿತರಿದ್ದರು.
ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಯಜಮಾನಿಯರು ತಂಡೋಪ ತಂಡವಾಗಿ ಆಗಮಿಸಿ ಗೃಹಲಕ್ಷ್ಮಿ ಯೋಜನೆಯನ್ನು ಕಣ್ತುಂಬಿಕೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ ಮಹಿಳೆಯರಿಗೆ ಆಯಾ ಜವಾಬ್ದಾರಿ ವಹಿಸಿಕೊಂಡಿದ್ದ ಪಿಡಿಓ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ರೀತಿ ಅನಾನುಕೂಲ ಉಂಟಾಗದಂತೆ ನೋಡಿಕೊಂಡರು.