ನವದೆಹಲಿ: ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ ೧೦ ರಿಂದ ೧೨ % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಇಂದು ಶುಕ್ರವಾರ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಈ ಬಗ್ಗೆ ಪ್ರಧಾನಮಂತ್ರಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದು, ಇದನ್ನು ಆರ್.ಬಿ.ಐ ಒಪ್ಪಿಲ್ಲ ಎಂದು ಸಚಿವರು ಉತ್ತರವನ್ನೂ ಬರೆದಿದ್ದಾರೆ. ನಬಾರ್ಡ್ ಕೇಂದ್ರ ಸರ್ಕಾರದ ಕೆಳೆಗೆ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರೇ ಅಸಹಾಯಕತೆಯನು ವ್ಯಕ್ತಪಡಿಸಿದರೆ ಹೇಗೆ ಎಂದರು.
ನಬಾರ್ಡ್ ನಲ್ಲಿ ಕಳೆದ ವರ್ಷ ೫೬೦೦ ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲಕ್ಕಾಗಿ ನೀಡಲಾಗಿತ್ತು ಈ ವರ್ಷ ೨೩೪೦ ಕೊಟಿ ರೂ.ಗಳನ್ನು ನೀಡಿದ್ದಾರೆ. ೩೨೨೦ ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ. ೫೮% ರಷ್ಟು ಕಡಿಮೆ ಮಾಡಿರುವುದು ರೈತರಿಗೆ ಮಾಡಿರುವ ದ್ರೋಹ. ನಬಾರ್ಡ್ ೪.೫೦% ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. ೫ ವರ್ಷಗಳ ಅಂಕಿಅಂಶಗಳನ್ನು ತೆಗೆದು ನೋಡಿದರೆ ೫೦೦೦ ಕೋಟಿ ರೂ.ಗಳಿದೆ. ಸಾಲ ಕೊಡುವುದು ಯಾವಾಗಲೂ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ. ಎಲ್ಲಾ ರಾಜ್ಯಗಳಿಗೂ ಕಡಿತ ಮಾಡಲಾಗಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವರಿಸಲಾಗಿದೆ.
ಆರು ವರ್ಷಗಳಿಂದ ಜಾಸ್ತಿ ಕೊಟ್ಟಿದ್ದು, ಈಗ ಕಡಿಮೆ ಮಾಡಿದರೆ ಹೇಗೆ? ನಮ್ಮ ಸರ್ಕಾರದ ವತಿಯಿಂದ ೫ ಲಕ್ಷದವರೆಗೆ ಬಡ್ಡಿರಹಿತವಾಗಿ ಸಾಲ ನೀಡಲಾಗುತ್ತಿದೆ. ೪.೫೦% ಬಡ್ಡಿ ಕೊಡುವುದು ನಮ್ಮ ಸರ್ಕಾರ ದೀರ್ಘಾವಧಿ ಮತ್ತು ಮಧ್ಯಮಾವಧಿ ಸಾಲವನ್ನು ೫-೧೫ ಲಕ್ಷದವರೆಗೆ ೩% ಬಡ್ಡಿದರದಲ್ಲಿ ನೀಡಲಾಗುತ್ತಿದೆ. ೧೨೦೦ ಕೋಟಿಗಳಿಗಿಂತಲೂ ಹೆಚ್ಚು ಬಡ್ಡಿಯನ್ನು ನೀಡುತ್ತೇವೆ. ಈ ಬಗ್ಗೆ ಆರ್.ಅಶೋಕ್, ಬಿ.ಎಸ್.ಯಡಿಯೂರಪ್ಪ, ಯತ್ನಾಳ್, ಸಿ.ಟಿ.ರವಿ, ಹೆಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಡಿದರು.