ಮಡಿಕೇರಿ : ಇದೇ ಜನವರಿ ೨೬ ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತೀರ್ಮಾನಿಸಲಾಯಿತು. ಕಳೆದ ಬಾರಿಯಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ಸಲಹೆ ಮಾಡಿದರು. ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಉಪಾಹಾರ ಕಲ್ಪಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ರಾಷ್ಟ್ರಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳನ್ನು ಶುಚಿಗೊಳಿಸಿ, ದೀಪಾಲಂಕಾರ ಮಾಡುವಂತೆ ನಗರಸಭಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧಿಸಿದಂತೆ ಸಚಿವರ ಭಾಷಣದಲ್ಲಿ ಬೆಳಕು ಚೆಲ್ಲುವಂತಾಗಬೇಕು. ಆ ನಿಟ್ಟಿನಲ್ಲಿ ಭಾಷಣ ಸಿದ್ಧಪಡಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಕ್ರೀಡಾಂಗಣ ಸ್ವಚ್ಚತೆ ಹಾಗೂ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ, ಕ್ರೀಡಾಂಗಣವನ್ನು ಒಂದು ವಾರಕ್ಕೆ ಮೊದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಪೂರ್ವಾಭ್ಯಾಸ ಹಾಗೂ ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚಿಸಿದರು. ಗಣರಾಜ್ಯೋತ್ಸವ ದಿನದಂದು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಈಗಾಗಲೇ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.