ಮದ್ದೂರು : ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಹೆಚ್ಚಿನ ವಿದ್ಯಾಭ್ಯಾಸ ಕಲ್ಪಿಸಬೇಕೆಂಬ ಉದ್ದೇಶದಿಂದ ನಗರದಲ್ಲಿಯೇ ಸಂಶೋಧನಾ ಕೇಂದ್ರ ಆರಂಭ ಮಾಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಮಂಗಳವಾರ ಪದವಿ ಪ್ರದಾನ ಸಮಾರಂಭ ಮತ್ತು ಸಂಶೋಧನಾ ಕೇಂದ್ರ ಹಾಗೂ ಪಿಎಂ-ಉಷಾ ಯೋಜನೆಯಡಿ ಕಂಪ್ಯೂಟರ್ ಪ್ರಯೋಗಾಲಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು ಸಂಶೋಧನಾ ಕೇಂದ್ರಕ್ಕಾಗಿ ಈ ಹಿಂದೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈಗ ಮದ್ದೂರಿನಲ್ಲಿ ಸಂಶೋಧನಾ ಚಟುವಟಿಕೆಗಳನ್ನು ಕೈ ಗೊಳ್ಳಲು ಅಗತ್ಯ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.
ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಬೇಕೆಂಬ ಉದ್ದೇಶದಿಂದ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಕಾಲೇಜಿನಲ್ಲಿ ಈ ಬಾರಿ ಶೇ.100 ರಷ್ಟು ಫಲಿತಾಂಶ ಬಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇತ್ತೀಚಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣ ಜತೆಗೆ ಕಂಪ್ಯೂಟರ್ ಶಿಕ್ಷಣವನ್ನು ಕಲಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಯಾವುದೇ ಪದವಿ, ಹುದ್ದೆ, ಸ್ಥಾನಮಾನವನ್ನು ಪಡೆಯಬಹುದು ಆದರೆ, ವಿದ್ಯಾರ್ಥಿ ಜೀವನಕ್ಕೆ ಮತ್ತೆ ಮರಳಲು ಸಾಧ್ಯವಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುವ ಮೂಲಕ ಉನ್ನತ ಸ್ಥಾನಕ್ಕೆ ಏರಬೇಕೆಂದು ಕಿವಿ ಮಾತು ಹೇಳಿದರು.
ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಈಗಾಗಲೇ ಸರ್ಕಾರಿ ಮಹಿಳಾ ಕಾಲೇಜಿಗೆ 8 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕಾಲೇಜಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಒಪ್ಪಿಗೆ ಸೂಚಿಸಿದರೆ ಕೋ-ಎಡ್ ಎಜುಕೇಷನ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಉದಯ್ ಭರವಸೆ ನೀಡಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಮಂಡ್ಯ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ, ಪ್ರಾಂಶುಪಾಲ ಪ್ರೊ.ಕೆ.ಬಿ.ನಾರಾಯಣ್, ಸ್ನಾತಕೋತ್ತರ ವಿಭಾಗಗಳ ಸಂಯೋಜಕ ಡಾ.ಕೆ.ಸಿದ್ದರಾಜು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಡಿ.ಮಹಾಲಿಂಗಯ್ಯ, ಸದಸ್ಯರಾದ ಜಯಂತಿ ಲಾಲ್ ಪಟೇಲ್, ಬಿಂದುಶ್ರೀ, ದಾಸೇಗೌಡ ಮತ್ತಿತರರು ಇದ್ದರು.



