ಬೆಂಗಳೂರು: ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಬೆಂಗಳೂರಿನ ಮೆಟ್ರೋ, ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತು ಎಂದರು.
ಅತ್ಯಂತ ಸೌಹಾರ್ದಯುತ ಭೇಟಿ ಇದಾಗಿತ್ತು. ಸುಮಾರು 40 ನಿಮಿಷಗಳ ಕಾಲ ನಾನು, ಸಿಎಂ ಸಿದ್ದರಾಮಯ್ಯ ಅವರು, ಸಚಿವರಾದ ಪರಮೇಶ್ವರ, ಮಹದೇವಪ್ಪ ಅವರು ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದೆವು ಎಂದು ಹೇಳಿದರು. ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದರು.