ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.
ಹಿಂಸಾಚಾರ ಘಟನೆಗಳ ಬೆನ್ನಲ್ಲೇ ರಾಜೀನಾಮೆ ಸಲ್ಲಿಸಿರುವ ಶೇಖ್ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೆ ನುಗ್ಗಿದ್ದಾರೆ. ಸೇನಾ ಮುಖ್ಯಸ್ಥರು ಶೀಘ್ರದಲ್ಲೇ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಹಸೀನಾ ಅವರು ಆಶ್ರಯ ಅರಸಿ ಭಾರತದತ್ತ ಬರುತ್ತಿದ್ದಾರೆ ಎಂದು ವರದಿಯಾಗಿದೆ.
ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಅಸಹಕಾರ ಚಳವಳಿಯ ಮೊದಲ ದಿನವಾದ ಭಾನುವಾರ, ಪ್ರತಿಭಟನಕಾರರು ಹಾಗೂ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವವರಿಗೆ ಅವಾಮಿ ಲೀಗ್, ಛಾತ್ರ ಲೀಗ್ ಮತ್ತು ಜುಬೊ ಲೀಗ್ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು.
ಅನಿರ್ದಿಷ್ಟ ಅವಧಿಗೆ ದೇಶದಾದ್ಯಂತ ಕರ್ಫ್ಯೂ ವಿಧಿಸಲು ಗೃಹ ಸಚಿವಾಲಯ ತೀರ್ಮಾನಿಸಿತ್ತು. ಫೇಸ್‌ಬುಕ್, ಮೆಸೆಂಜರ್, ವಾಟ್ಸ್‌ಆ್ಯಪ್ ಮತ್ತು ಇನ್‌ಸ್ಟಾಗ್ರಾಂ ಸೇವೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ಆದೇಶಿಸಿತ್ತು. 4ಜಿ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತಕ್ಕೂ ಆದೇಶಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.