ಮಂಡ್ಯ: “ಅಭಿವೃದ್ಧಿಗೆ ಹಣವಿಲ್ಲ ಎಂದು ಸುಳ್ಳು ಹರಡುವ ಬಿಜೆಪಿಗೆ, ಒಂದೇ ದಿನ 1146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ನಾವು ಚಾಲನೆ ನೀಡಿದ್ದೇವೆ ಎಂಬುದು ನಮ್ಮ ಸರ್ಕಾರದ ಸ್ಪಷ್ಟ ಸವಾಲು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ, “ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂಪಾಯಿ ಕೆಲಸ ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿಯು ಏನು ಮಾಡಿದೆ ಎಂಬುದನ್ನು ಜನರ ಮುಂದೆ ತೋರಿಸಿ” ಎಂದು ಹೇಳಿದರು.
ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಹಾಗೂ ಪುನಶ್ಚೇತನಕ್ಕೆ 52 ಕೋಟಿ ರೂ., ಹಾಗೂ ಮತ್ತೊಂದು ಹಂತದಲ್ಲಿ 10 ಕೋಟಿ ರೂ. ನೀಡಿರುವುದು ಕಾಂಗ್ರೆಸ್ ಸರ್ಕಾರ. ಹಾಲು ಉತ್ಪಾದಕರಿಗೆ ಲೀಟರ್‌ಗೆ 5 ರೂ. ಸಹಾಯಧನವೂ ನೀಡಲಾಗಿದೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೂ ಅಗತ್ಯ ಅನುದಾನ ಒದಗಿಸಲಾಗಿದೆ.
ರಾಜ್ಯ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳಿಂದ ಜನರ ಖರೀದಿ ಸಾಮರ್ಥ್ಯ ಹೆಚ್ಚಿದ ಪರಿಣಾಮ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಅವರು ಹೇಳಿದರು. “ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಅಭಿವೃದ್ಧಿಗೆ ಶಾಸಕ ಉದಯ್ ಅವರ ಬೇಡಿಕೆಗೆ ನಾವು ಒಪ್ಪಿಗೆ ನೀಡಿದ್ದೇವೆ,” ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ ಗೊಬ್ಬರವನ್ನೂ ಸರಿಯಾಗಿ ಪೂರೈಸುತ್ತಿಲ್ಲ. ಕೇಂದ್ರದ ವಿರುದ್ಧ ಸವಾಲು ಎಸೆಯುತ್ತಾ, “ರಾಜ್ಯ ಪ್ರತಿನಿಧಿಸುವ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ಗೊಬ್ಬರ ಪೂರೈಸುವ ಬಗ್ಗೆ ನಿಂತು ಕೇಳಲಿ,” ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು.